Header Ads Widget

ಸರ್ಚ್ ಕೂರ್ಗ್ ಮೀಡಿಯ

ಅರ್ಹರಿಗೆ ಸರ್ಕಾರದ ಯೋಜನೆ ತಲುಪಿಸಿ; ಮಲ್ಲಿಕಾರ್ಜುನ ಗೌಡ


ಸರ್ಕಾರದ ಯಾವುದೇ ಯೋಜನೆಯನ್ನು ಸರಿಯಾದ ರೀತಿಯಲ್ಲಿ ಅನುμÁ್ಠನಕ್ಕೆ ತಂದು ಅರ್ಹ ಫಲಾನುಭವಿಗಳಿಗೆ ಸೂಕ್ತ ರೀತಿಯಲ್ಲಿ ತಲುಪಿಸಿದಾಗ ಮಾತ್ರ ಯೋಜನೆಯೊಂದು ಯಶಸ್ವಿಯಾಗಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ ಅವರು ಹೇಳಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ನ್ಯಾಯಾಲಯ ಆವರಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆ(ಬಡತನ ನಿರ್ಮೂಲನೆ ಪರಿಣಾಮಕಾರಿ ಯೋಜನೆ) 2015 ಕುರಿತು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಹಲವಾರು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತಾಗಬೇಕು. ಈ ಮೂಲಕ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ವಿದ್ಯಾವಂತರಾಗಬೇಕು. ಶಿಕ್ಷಣವಿದ್ದರೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ತಿಳಿಯಲು ಸಾಧ್ಯವಾಗುತ್ತದೆ ಎಂದರು.
ಬಡವನಾಗಿ ಹುಟ್ಟುವುದು ನಮ್ಮ ತಪ್ಪಲ್ಲ. ಬಡವನಾಗಿ ಸಾಯುವುದು ನಮ್ಮ ತಪ್ಪಾಗುತ್ತದೆ. ಈ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳನ್ನು ಬಳಸಿಕೊಂಡು ಜೀವನ ಉತ್ತಮ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹೇಳಿದರು.
ಬಡತನ, ನಿರುದ್ಯೋಗ, ಹಸಿವಿನ ಬಳಲಿಕೆ ಇಲ್ಲದಿದ್ದರೆ ಆ ದೇಶ ಅಭಿವೃದ್ಧಿ ಸಾಧಿಸುತ್ತದೆ. ಸರ್ಕಾರ ಸ್ವಯಂ ಉದ್ಯೋಗ ಮಾಡುವವರಿಗಾಗಿ ವಿವಿಧ ಯೋಜನೆಗಳಲ್ಲಿ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡುತ್ತದೆ. ಯುವ ಜನತೆ ಮತ್ತು ಗ್ರಾಮೀಣ ಭಾಗದ ಜನರು ಇವುಗಳ ಸದುಪಯೋಗ ಪಡೆಯುವಂತಾಗಬೇಕು. ಈ ನಿಟ್ಟಿನಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ಜನ ಸಾಮಾನ್ಯರಿಗೆ ವಿವಿಧ ಯೋಜನೆಗಳ ಮಾಹಿತಿ ನೀಡುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಸಲಹೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಮಾತನಾಡಿ ಜಸ್ಟೀಸ್ ಗೋಪಾಲ ಗೌಡ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪಿರುವ ಬಗ್ಗೆ ಮತ್ತು ಯೋಜನೆಗಳು ತಲುಪಿಲ್ಲದರ ಬಗ್ಗೆ ಮಾಹಿತಿ ನೀಡಬೇಕು. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡ ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಹಲವಾರು ಸಂದರ್ಭಗಳಲ್ಲಿ ಅದು ಅರ್ಹ ಫಲಾನುಭವಿಗಳನ್ನು ತಲುಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮಾಹಿತಿ ನೀಡುವಂತಾಗಬೇಕು ಎಂದರು.
ಈ ಸಂಬಂಧ ಅರೆಕಾಲಿಕ ಕಾನೂನು ಸ್ವಯಂ ಸೇವಕರು ಸ್ಥಳೀಯವಾಗಿ ಕಾರ್ಯನಿರ್ವಹಿಸಬೇಕು. ಯೋಜನೆಗಳು ಸಮರ್ಪಕ ರೀತಿಯಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿದೆಯೇ ಇಲ್ಲವೇ ಎಂಬ ಬಗ್ಗೆ ವರದಿ ನೀಡಬೇಕು ಎಂದು ಅವರು ಹೇಳಿದರು.
ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್.ಕವನ್ ಅವರು ಮಾತನಾಡಿ ಯೋಜನೆ ಅನುμÁ್ಠನ ಸರಿಯಾದ ರೀತಿಯಲ್ಲಿ ಆದರೆ ಮಾತ್ರವೇ ಅಭಿವೃದ್ಧಿ ಸಾಧ್ಯವಾಗುತ್ತದೆ. ಬಡವರಿಗೆ ಮತ್ತು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪಬೇಕು ಎಂದು ಅವರು ಹೇಳಿದರು.
ಈ ಸಂದರ್ಭ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಉಚಿತವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸ ಅವರು ವಿತರಿಸಿದರು.
ಇದೇ ವೇಳೆ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ಕಂದಾಯ ಇಲಾಖೆಯೆ ಯೋಜನೆಗಳ ಬಗ್ಗೆ ತಹಶೀಲ್ದಾರ್ ಮಹೇಶ್, ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ವೈದ್ಯಾಧಿಕಾರಿ ಡಾ.ದೇವರಾಜ್ ಅವರು ತಮ್ಮ ಇಲಾಖಾ ವ್ಯಾಪ್ತಿಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಚಂದ್ರಶೇಖರ ಪಿ.ಎಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ ವಿಜಯ್ ಕುಮಾರ್, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಬಿ.ಕೆ ಮನು, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಸ್ಮಿತಾ ನಾಗಲಪುರ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಇತರರು ಇದ್ದರು.