Header Ads Widget

Responsive Advertisement

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೈಮಾಸಿಕ ಸಭೆ: ಹಲವು ವಿಚಾರ ಚರ್ಚೆ


ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೈಮಾಸಿಕ ಸಭೆಯು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿನರಾಳ್ಕರ್ ಭೀಮರಾವ್ ಲಗಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಬಡತನ ನಿರ್ಮೂಲನೆ, ಮಾನಸಿಕ ರೋಗಿಗಳು ಮತ್ತು ಮಾನಸಿಕ ಅಶಕ್ತ ವ್ಯಕ್ತಿಗಳಿಗೆ ಕಾನೂನು ನೆರವು ನೀಡುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು ಎಂದರು.
ಬಡತನ ನಿರ್ಮೂಲನೆ, ಸಮಾಜದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಮೂಲ ಹಕ್ಕು ಮತ್ತು ಸೌಲಭ್ಯ ದೊರಕಿಸುವಂತಾಗಬೇಕು. ಈ ಬಗ್ಗೆ ರಾಜ್ಯ ಉಚ್ಛ ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದ್ದು, ಮಾಹಿತಿ ನೀಡಬೇಕಿದೆ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಕೊಡಗು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿಸೆಂಬರ್, 19 ರಂದು ವ್ಯಾಜ್ಯ ಪೂರ್ವ ಪ್ರಕರಣಗಳು ಮತ್ತು ನ್ಯಾಯಾಲಯದಲ್ಲಿ ಬಾಕಿಯಿರುವ ರಾಜಿಯಾಗುವಂತಹ ಎಲ್ಲಾ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್ನ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಕೋವಿಡ್-19 ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವುದು. ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಜೊತೆಗೂಡಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳುವುದು ಮತ್ತಿತರ ಬಗ್ಗೆ ಚರ್ಚೆ ನಡೆಯಿತು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಪಿ.ಎಸ್.ಚಂದ್ರಶೇಖರ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಜಯ ಕುಮಾರ್ ಅವರು ಹಲವು ಸಲಹೆ ನೀಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ಬಿ.ಕೆ.ಮನು, ಅಪರ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಸ್ಮಿತಾ ನಾಗಲಾಪುರ, ಜಿಲ್ಲಾ ಸರ್ಕಾರಿ ವಕೀಲರಾದ ಸಿ.ಎಂ.ಕವೀಂದ್ರ, ಸಹಾಯಕ ನಿರ್ದೇಶಕರ ಅಭಿಯೋಜಕರಾದ ಸಂತೋಷ್ ಬಿ.ಎಸ್., ಅರೆಕಾಲಿಕ ಸ್ವಯಂ ಸೇವಕರಾದ ಜಾಯ್ಸ್ ಮೆನೇಜಸ್, ಫಾತಿಮಾ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಇತರರು ಇದ್ದರು.