Header Ads Widget

Responsive Advertisement

ರಾಷ್ಟ್ರೀಯ ವಿಜ್ಞಾನ ದಿನಾಚರಣೆ: 2021 ರ ಅಂಗವಾಗಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ


ವಿದ್ಯಾರ್ಥಿಗಳು ಪ್ರಚಲಿತ ವೈಜ್ಞಾನಿಕ ಸಂಶೋಧನೆಗಳು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಅಧ್ಯಯನ ನಡೆಸುವ ಮೂಲಕ ವೈಜ್ಞಾನಿಕ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು

ಎಂದು ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ ಹೇಳಿದರು.

    ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ,ಸಮಗ್ರ ಶಿಕ್ಷಣ ಕರ್ನಾಟಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ಮಡಿಕೇರಿ ನಗರದ ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಯ  ಸಹಯೋಗದಲ್ಲಿ ಮಾರ್ಚ್ 4 ರಂದು ( ಗುರುವಾರ )  ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ: 2021 ರ  ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕೊಡಗು ಜಿಲ್ಲಾಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತಗೊಂಡ ತಂಡಗಳಿಗೆ ಪ್ರಶಸ್ತಿ ಪತ್ರ ಪ್ರದಾನ ಮಾಡಿ ಮಾತನಾಡಿದರು.

    ವಿದ್ಯಾರ್ಥಿಗಳು ಭಾರತೀಯ ವಿಜ್ಞಾನಿಗಳು ಕೈಗೊಂಡಿರುವ ಸಾಧನೆಗಳ   ಬಗ್ಗೆ ಹೆಚ್ಚಿನ ಸಂಶೋಧನೆ ಕೈಗೊಂಡು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

 ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ಶಿಕ್ಷಣ ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ವಿಜ್ಞಾನ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಈ ದಿಸೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಕೂಡ ವಿಜ್ಞಾನ ಪರಿಷತ್ತಿನ ವತಿಯಿಂದ ಉತ್ತಮ ವೈಜ್ಞಾನಿಕ ಕಾರ್ಯಕ್ರಮಗಳನ್ನು ಉತ್ತಮವಾಗಿ ಸಂಘಟಿಸುತ್ತಿರುವುದು ಶ್ಲಾಘನೀಯವಾದುದು ಎಂದು ಗಾಯತ್ರಿ ಹೇಳಿದರು.

    ವಿಜ್ಞಾನ ಕಾರ್ಯಕ್ರಮದ ಸಂಘಟಕರೂ ಆದ ರಾಜ್ಯ ವಿಜ್ಞಾನ ಪರಿಷತ್ತಿನ ಮಾಜಿ ಜಂಟಿ ಕಾರ್ಯದರ್ಶಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ವನ್ನು ಜನಪ್ರಿಯಗೊಳಿಸಲು ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದರು.

  ಇಂತಹ ವಿಜ್ಞಾನ ಸ್ಪರ್ಧಾ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು  ಮೂಲ ವಿಜ್ಞಾನ ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ವಿಜ್ಞಾನ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದರು.

 ಜಿಲ್ಲಾಮಟ್ಟದಿಂದ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಗೊಂಡಿರುವ ಸ್ಪರ್ಧಿಗಳು ಮಾರ್ಚ್ ಮೂರನೇ ವಾರದಲ್ಲಿ ಬೆಂಗಳೂರಿನಲ್ಲಿ ದೂರದರ್ಶನ ಕೇಂದ್ರದ ಚಂದನ  ವಾಹಿನಿಯಲ್ಲಿ ಪ್ರಸಾರವಾಗುವ ' ಥಟ್ ಅಂತ ಹೇಳಿ?!' ರಸಪ್ರಶ್ನೆ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯನ್ನು  ಭಾಗವಹಿಸಲಿದ್ದಾರೆ ಎಂದು ಪ್ರೇಮಕುಮಾರ್ ತಿಳಿಸಿದರು.

    ಕಾಲೇಜು ಪ್ರಾಂಶುಪಾಲ ಪಿ.ಆರ್.ವಿಜಯ್, ಸ್ಪರ್ಧಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಸಿ.ಎಸ್.ಸುರೇಶ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.

 ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಸಹ ಕಾರ್ಯದರ್ಶಿ ಜಿ.ಶ್ರೀಹರ್ಷ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಡಿ.ಎಂ.ರೇವತಿ, ಮಾರ್ಗದರ್ಶಿ ಶಿಕ್ಷಕರಾದ  ಹ್ಯೂಬರ್ಟ್ ಡಯಾಸ್, ಗೀತಾಭಾವೆ, ಎನ್.ಎಸ್.ಚಂದ್ರಕಲಾ, ಮಧುಕುಮಾರ್, ಕಂಪ್ಯೂಟರ್ ಪ್ರೋಗ್ರಾಮರ್ ಡಿ.ಎಸ್.ಪ್ರಸಾದ್  ಇದ್ದರು.

   ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ನಗರದ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳಾದ ಪಿ. ಚಿನ್ಮಯಿ ಹಾಗೂ ಸರಿನ ಶಿಜ ಅವರನ್ನು ವಿಜ್ಞಾನ ಪರಿಷತ್ತಿನ ವತಿಯಿಂದ  ಅಭಿನಂದಿಸಲಾಯಿತು. ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ವಿತರಿಸಲಾಯಿತು.

ಸುದ್ದಿ-ಚಿತ್ರ: ಟಿ.ಜಿ.ಪ್ರೇಮಕುಮಾರ್ 


Search Coorg Media

Coorg's Largest Online Media Network