Header Ads Widget

ಸರ್ಚ್ ಕೂರ್ಗ್ ಮೀಡಿಯ

ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನ

ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ (2021-22) ಸಹ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬನಾ ಎಂ.ಷೇಕ್ ಅವರು ತಿಳಿಸಿದ್ದಾರೆ. 

ಸಾಮಾನ್ಯ ರೈತರಿಗೆ ರೂ. 100 ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಂಡದ ರೈತರಿಗೆ ರೂ. 25 ನೋಂದಣಿ ಶುಲ್ಕವಿದೆ. ಅರ್ಹತೆಗಳು: ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. 

ತಾಲ್ಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ.  ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ. ಆದರೆ ಕೆಳ ಹಂತದ ಸ್ಪರ್ಧೆಗೆ ಸ್ಪರ್ಧಿಸುವಂತಿಲ್ಲ. ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕವನ್ನು ತಿಳಿಸಬೇಕು 

ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ರೂ. 15 ಸಾವಿರ, ದ್ವಿತೀಯ ರೂ. 10 ಸಾವಿರ, ತೃತೀಯ ರೂ. 5 ಸಾವಿರ,  ಜಿಲ್ಲಾ ಮಟ್ಟದಲ್ಲಿ ಪ್ರಥಮ ರೂ. 30 ಸಾವಿರ, ದ್ವಿತೀಯ ರೂ. 25 ಸಾವಿರ ಮತ್ತು ತೃತೀಯ ರೂ. 20 ಸಾವಿರ, ರಾಜ್ಯ ಮಟ್ಟದಲ್ಲಿ ರೂ. 50 ಸಾವಿರ, ದ್ವಿತೀಯ ರೂ. 40 ಸಾವಿರ ಮತ್ತು ತೃತೀಯ ರೂ 35 ಸಾವಿರ ಬಹುಮಾನ ನೀಡಲಾಗುತ್ತದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚೆಯುಳ್ಳ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಕಂದಾಯ ಇಲಾಖೆಯಿಂದ ಪಡೆದ ಪಹಣಿ ಪತ್ರದೊಂದಿಗೆ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,