Header Ads Widget

Responsive Advertisement

ಡಿ.17 ಮತ್ತು 18 ರಂದು ನದಿ ಉತ್ಸವ

ಡಿ.17 ಮತ್ತು 18 ರಂದು ನದಿ ಉತ್ಸವ 


ಮಡಿಕೇರಿ ಡಿ.06: ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯಲ್ಲಿ ‘ನದಿ ಉತ್ಸವ’ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ ಅವರು ಕೋರಿದರು. 

ಕಾವೇರಿ ನೀರಾವರಿ ನಿಗಮ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನದಿ ಉತ್ಸವ ಆಚರಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಹಾಗೂ ವಿವಿಧ ಸಂಸ್ಥೆಗಳ ಪ್ರಮುಖರ ಜೊತೆ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ನದಿ ಉತ್ಸವ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳು ತೊಡಗಿಸಿಕೊಳ್ಳುವಂತಾಗಬೇಕು. ನದಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಸಲಹೆ, ಮಾರ್ಗದರ್ಶನ ಅತ್ಯಗತ್ಯ ಎಂದರು.

ಸಭೆಯ ಆರಂಭದಲ್ಲಿ ಮಾತನಾಡಿದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ನಾಗೇಶ್ ಅವರು ಡಿಸೆಂಬರ್, 17 ಮತ್ತು 18 ರಂದು ನದಿ ಉತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ. ಡಿಸೆಂಬರ್, 17 ರಂದು ತಲಕಾವೇರಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ ಡಿ.18 ರಂದು ಕುಶಾಲನಗರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು. 

ಡಿಸೆಂಬರ್, 17 ರಂದು ತಲಕಾವೇರಿಯಲ್ಲಿ ಮಧ್ಯಾಹ್ನದ ವೇಳೆಗೆ ನದಿ ಉತ್ಸವ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವಚ್ಛತೆ ಸಂಬಂಧ ಬೈಕ್ ಜಾಗೃತಿ ಜಾಥಾ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಬಳಿಕ ತ್ರಿವೇಣಿ ಸಂಗಮದಲ್ಲಿ ನದಿ ಸಂರಕ್ಷಣೆ ಸಂಬಂಧಿಸಿದಂತೆ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಜೊತೆಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ, ಹಾಗೆಯೇ ದೀಪೋತ್ಸವ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಇಇ ಅವರು ತಿಳಿಸಿದರು. 

ಹಾಗೆಯೇ ಡಿಸೆಂಬರ್, 18 ರಂದು ಕುಶಾಲನಗರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾವೇರಿ ಪ್ರತಿಮೆಯಿಂದ ಅಯ್ಯಪ್ಪಸ್ವಾಮಿ ದೇವಾಲಯದವರೆಗೆ ನದಿ ಉತ್ಸವದ ಜಾಗೃತಿ ಜಾಥಾ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು. 

ಕಾವೇರಿ ನದಿ ಜಾಗೃತಿ ವೇದಿಕೆ ಅಧ್ಯಕ್ಷರಾದ ಚಂದ್ರಮೋಹನ್ ಅವರು ಭಾಗಮಂಡಲದಿಂದ ಶಿರಂಗಾಲದವರೆಗೆ 23 ಗ್ರಾ.ಪಂ. ಹಾಗೂ ಒಂದು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಂಘ ಸಂಸ್ಥೆಗಳು ನದಿ ಉತ್ಸವದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಅವರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಪ್ರತೀ ವರ್ಷ ನದಿ ಉತ್ಸವ ಹಮ್ಮಿಕೊಳ್ಳಬೇಕು. ವಿವಿಧ ಧರ್ಮದ ಸ್ವಾಮೀಜಿಗಳನ್ನು ಆಹ್ವಾನಿಸಬೇಕು ಎಂದು ಅವರು ಸಲಹೆ ಮಾಡಿದರು. 

ಹೋಂ ಸ್ಟೇ ಅಸೋಷಿಯೇನ್‍ನ ಬಿ.ಜಿ.ಅನಂತಶಯನ ಅವರು ಮಾತನಾಡಿ ನದಿ ಉತ್ಸವ ಸಂಬಂಧ ವಿವಿಧ ಕಾರ್ಯ ಚಟುವಟಿಕೆಗಳಿಗೆ ಅಧಿಕಾರಿಗಳನ್ನು ನಿಯೋಜಿಸುವಂತಾಗಬೇಕು. ಕೊಡವ ಮತ್ತು ಗೌಡ ಸಮಾಜಗಳ ಪ್ರಮುಖರನ್ನು ಆಹ್ವಾನಿಸಬೇಕು ಎಂದು ಅವರು ಸಲಹೆ ಮಾಡಿದರು.

ಮೋಂತಿ ಗಣೇಶ್ ಅವರು ಮಾತನಾಡಿ ಬೈಕ್ ರ್ಯಾಲಿ ಬದಲಿಗೆ ತಲಕಾವೇರಿಯಿಂದ ಭಾಗಮಂಡಲದವರೆಗೆ ಅವರವರ ವಾಹನದಲ್ಲಿಯೇ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಬೇಕು. ಕೋವಿಡ್ ಹಿನ್ನೆಲೆ ಸಾಂಸ್ಕøತಿಕ ಕಾರ್ಯಕ್ರಮಗಳ ಅಗತ್ಯವಿದೆಯೇ ಎಂಬ ಬಗ್ಗೆ ಚಿಂತಿಸಬೇಕಿದೆ ಎಂದು ಅವರು ಸಲಹೆ ಮಾಡಿದರು. 

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ನದಿ ಉತ್ಸವ ಕಾರ್ಯಕ್ರಮದಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 

ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಭಾಗಮಂಡಲದಿಂದ ಕುಶಾಲನಗರದವರೆಗೆ ಕಾವೇರಿ ನದಿ ಪಾತ್ರದಲ್ಲಿ ಆಯಾಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಏರ್ಪಡಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. 

ಎನ್‍ಸಿಸಿ ಅಧಿಕಾರಿ ರಾಘವ ಅವರು ಸಂತೆ ಹಾಗೂ ಜನದಟ್ಟಣೆ ಪ್ರದೇಶದಲ್ಲಿ ನದಿ ಸಂರಕ್ಷಣೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅವರು ಕೋರಿದರು.

ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಅವರು ಮಾತನಾಡಿ ಕಾವೇರಿ ನದಿ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಆ ನಿಟ್ಟಿನಲ್ಲಿ ಕಾವೇರಿ ನದಿ ಪಾತ್ರದ ಗ್ರಾ.ಪಂ.ಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಅವರು ಸಲಹೆ ಮಾಡಿದರು. 

ರೋಟರಿ ಕ್ಲಬ್‍ನ ಉಪ ರಾಜ್ಯಪಾಲರಾದ ಅನಿಲ್ ಎಚ್.ಟಿ. ಅವರು ರೋಟರಿ ಕ್ಲಬ್ ವತಿಯಿಂದ ನದಿ ಪಾತ್ರದಲ್ಲಿ ನದಿ ಸಂರಕ್ಷಣೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಕಾವೇರಿ ನದಿ ಪಾತ್ರದಲ್ಲಿ ಸ್ವಚ್ಛತೆ ಕಾಪಾಡುವುದು, ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು. 

ರೆಡ್‍ಕ್ರಾಸ್ ಸಂಸ್ಥೆಯ ಮುರಳಿಧರ ಅವರು ಯೂತ್ ರೆಡ್‍ಕ್ರಾಸ್‍ನ ಸ್ವಯಂ ಸೇವಕರು ನದಿ ಸಂರಕ್ಷಣೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು. 

ಪ್ರಮುಖರಾದ ಎಂ.ಬಿ.ದೇವಯ್ಯ ಅವರು ಮಾತನಾಡಿ ತಲಕಾವೇರಿ, ಭಾಗಮಂಡಲ ದೇವಾಲಯ ಪ್ರಾಮುಖ್ಯತೆ ಮತ್ತು ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು. ಕಾವೇರಿಯು ಸಪ್ತ ನದಿಗಳಲ್ಲಿ ಒಂದಾಗಿದ್ದು, ನದಿ ಪಾತ್ರದ ಇಕ್ಕೆಲಗಳಲ್ಲಿ ಕೊಳಚೆ ನೀರು ಹರಿಸುವುದನ್ನು ತಡೆಯಬೇಕು. ಆ ನಿಟ್ಟಿನಲ್ಲಿ ಈ ಬಗ್ಗೆ ತುರ್ತು ಕ್ರಮವಹಿಸಬೇಕಿದೆ ಎಂದು ಅವರು ಸಲಹೆ ಮಾಡಿದರು. 

ಭಾಗಮಂಡಲವನ್ನು ‘ಟೆಂಪಲ್ ಟೌನ್’ ಎಂದು ಪ್ರಕಟಿಸಬೇಕು. ಪ್ರವಾಸಿ ಸ್ಥಳದಿಂದ ಕೈಬಿಡಬೇಕು. ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ವಸ್ತ್ರ ಸಂಹಿತೆ ಪಾಲಿಸಬೇಕು. ಆ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಸಲಹೆ ಮಾಡಿದರು. 

ಈ ಕುರಿತು ಪ್ರತಿಕ್ರಿಯಿಸಿದ ಡಾ.ಬಿ.ಸಿ.ಸತೀಶ ಅವರು ‘ಟೆಂಪಲ್ ಟೌನ್’ ಪ್ರಕಟಿಸುವ ಸಂಬಂಧ ಮುಜರಾಯಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ನದಿ ಪಾತ್ರದಲ್ಲಿ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು. 

      ನದಿ ಉತ್ಸವ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಉಪ ಸಮಿತಿಯನ್ನು ರಚಿಸಲು ನಿರ್ಧರಿಸಲಾಯಿತು.       ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಪ್ರಮುಖರಾದ ವನಿತಾ ಚಂದ್ರಮೋಹನ್ ಸೀಮಾ ತ್ರಿಪಾಟಿ, ಉಪ ಅರಣ್ಯಸಂರಕ್ಷಣಾಧಿಕಾರಿ ಪಾಷಾ, ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ತಲಕಾವೇರಿ-ಭಾಗಮಂಡಲ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ತಹಶೀಲ್ದಾರ್ ಮಹೇಶ್, ಗೋವಿಂದರಾಜು, ಸ್ಕೌಟ್ಸ್ ಮತ್ತು ಗೈಡ್ಸ್‍ನ ದಮಯಂತಿ ಅವರು ಸಲಹೆ ನೀಡಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,