ಪ್ರಬುದ್ಧ ಭಾರತ ನಿರ್ಮಾಣಕ್ಕೆ ಯುವ ಮತದಾರರು ಕೈಜೋಡಿಸಿ: ಜಿನರಾಳಕರ ಭೀಮರಾವ್ ಲಗಮಪ್ಪ
ಮಡಿಕೇರಿ ಜ.25: ಪ್ರಜಾಪ್ರಭುತ್ವ ಬಲಪಡಿಸುವಲ್ಲಿ ಯುವಜನರ ಪಾತ್ರ ಪ್ರಮುಖವಾಗಿದ್ದು, ಆ ದಿಸೆಯಲ್ಲಿ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಯುವ ಮತದಾರರು ಕೈಜೋಡಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿನರಾಳಕರ್ ಭೀಮರಾವ್ ಲಗಮಪ್ಪ ಅವರು ಕರೆ ನೀಡಿದ್ದಾರೆ.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಮಂಗಳವಾರ ನಡೆದ ‘ರಾಷ್ಟ್ರೀಯ ಮತದಾರರ ದಿನ ‘ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು ಅಸ್ತಿತ್ವಕ್ಕೆ ಬಂದ ದಿನವನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಮತದಾನದ ಮಹತ್ವ, ಪ್ರಾಮುಖ್ಯತೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಸಮಾಜದಲ್ಲಿ ಸುಧಾರಣೆಗೆ ಎಲ್ಲರೂ ಪ್ರಯತ್ನಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಚುನಾವಣೆಯು ಪ್ರಮುಖ ಪಾತ್ರ ವಹಿಸುತ್ತದೆ. ಆ ನಿಟ್ಟಿನಲ್ಲಿ ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್ತು, ಗ್ರಾಮೀಣ ನಗರ ಸ್ಥಳೀಯ ಸಂಸ್ಥೆಗಳು, ಸಹಕಾರ ಸಂಘಗಳು ಹೀಗೆ ಚುನಾವಣೆ ವ್ಯವಸ್ಥೆಗಳನ್ನು ಕಾಣಬಹುದಾಗಿದೆ ಎಂದು ಅವರು ವಿವರಿಸಿದರು.
ಚುನಾವಣೆ ಆರಂಭವಾಗುವುದಕ್ಕೂ ಮತದಾರರ ಪಟ್ಟಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳು 6 ತಿಂಗಳು ಮುಂಚಿತವಾಗಿ ಆರಂಭವಾಗುತ್ತದೆ. ಮನೆ ಮನೆಗೆ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡಿ, ಮತದಾರರ ಗುರುತಿನ ಚೀಟಿ ಮತ್ತಿತರ ಮಾಹಿತಿ ಪಡೆಯಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತಿತರ ಕಾರ್ಯಗಳು ನಡೆಯಲಿವೆ ಎಂದರು.
‘ಹದಿನೆಂಟು ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು. ಸಂವಿಧಾನ ನೀಡಿರುವ ಅಧಿಕಾರವನ್ನು ಸಮರ್ಥವಾಗಿ ಯುವಜನರು ಬಳಸಿಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಕರೆ ನೀಡಿದರು.’
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಹ್ಮಣ್ಯ ಅವರು ಮಾತನಾಡಿ ಸ್ವಾತಂತ್ರ್ಯಕ್ಕೂ ಮೊದಲು ದೇಶದಲ್ಲಿ ಹಲವರು ಆಡಳಿತ ನಡೆಸಿದ್ದಾರೆ. ಸ್ವಾತಂತ್ರ್ಯ ನಂತರ ನಮ್ಮದೇ ಆದ ಸಂವಿಧಾನ ಜಾರಿಗೆ ಬಂದಿದೆ. ಆ ದಿಸೆಯಲ್ಲಿ ಸಂವಿಧಾನ ಜಾರಿಗೆ ಬರುವುದಕ್ಕೂ ಮೊದಲ ದಿನ ಮುಂಚಿತವಾಗಿ ಮತದಾರರ ದಿನ ಆಚರಿಸಲಾಗುತ್ತಿದೆ ಎಂದರು.
ಈ ಹಿಂದೆ ಭಾರತ ಚುನಾವಣಾ ಆಯೋಗಕ್ಕೆ ಅಧ್ಯಕ್ಷರಾಗಿದ್ದ, ಟಿ.ಎನ್.ಶೇಷನ್ ಅವರು ಚುನಾವಣೆ ಸಂಬಂಧ ಅಮೂಲಾಗ್ರ ಬದಲಾವಣೆ ತಂದರು. ಮತದಾರರ ಭಾವಚಿತ್ರ ಒಳಗೊಂಡ ಗುರುತಿನ ಚೀಟಿ ಸೇರಿದಂತೆ ಸಾಕಷ್ಟು ಸುಧಾರಣೆ ತಂದರು ಎಂದರು.
ಭಾರತ ಚುನಾವಣಾ ಆಯೋಗಕ್ಕೆ ಶೇಷನ್ ಅವರ ಕೊಡುಗೆ ಅಪಾರ. ರಾಷ್ಟ್ರದ ಪ್ರಜೆಗಳಾಗಿ ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದನ್ನು ಅಬ್ರಾಹಂ ಲಿಂಕನ್ ಅವರು ಒತ್ತಿ ಹೇಳಿದ್ದಾರೆ ಎಂದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮಾತನಾಡಿ ರಾಷ್ಟ್ರದಲ್ಲಿ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಮತಹಕ್ಕು ಚಲಾಯಿಸುವ ಅವಕಾಶ ಮಾಡಲಾಗಿದೆ. ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಚುನಾವಣಾ ಸಂದರ್ಭದಲ್ಲಿ ಮತದಾರರ ಶಿಕ್ಷಣ ಮತ್ತು ಮತದಾನದ ಮಹತ್ವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಮತ್ತು ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ಅವರು ಮತದಾನದ ದಿನದ ಮಹತ್ವ ಕುರಿತು ಮಾತನಾಡಿದರು.
ಮತದಾರರ ದಿನದ ಮಹತ್ವ ಕುರಿತು ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬೋಧಿಸಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಹಾಗೂ ಪ್ರಶಂಸನಾ ಪತ್ರ ನೀಡಲಾಯಿತು.
ಯುವ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ವಿತರಿಸಲಾಯಿತು. ಉತ್ತಮ ಮತಗಟ್ಟೆ ಅಧಿಕಾರಿಯವರನ್ನು ಗೌರವಿಸಲಾಯಿತು. ರಾಷ್ಟ್ರೀಯ ಮತದಾರರ ದಿನದ ಪ್ರಯುಕ್ತ ರಾಜ್ಯ ಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಗೋಣಿಕೊಪ್ಪ ವಿದ್ಯಾನಿಕೇತನ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸತೀಶ ವಿ.ಎನ್.ಅವರನ್ನು ಗೌರವಿಸಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೇದಮೂರ್ತಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ, ತಹಶೀಲ್ದಾರ್ ಪಿ.ಎಸ್.ಮಹೇಶ್, ಇತರರು ಇದ್ದರು. ಶಿಕ್ಷಕಿ ಅನಿತಾ ನಿರೂಪಿಸಿದರು. ತಹಶೀಲ್ದಾರ್ ಮಹೇಶ್ ವಂದಿಸಿದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network