ಪ್ರತಿ ಗ್ರಾ.ಪಂ.ಮಟ್ಟದಲ್ಲಿಯೂ ಸಹಕಾರ ಸಂಘ ಸ್ಥಾಪನೆ: ಎಸ್.ಟಿ.ಸೋಮಶೇಖರ್
ಮಡಿಕೇರಿ ಫೆ.04: ರಾಜ್ಯದ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹಕಾರ ಸಂಘಗಳನ್ನು ಬಲಪಡಿಸಲು ಮುಂದಾಗಲಾಗಿದ್ದು, ಈ ಅವಕಾಶವನ್ನು ಗ್ರಾಮೀಣ ಸಹಕಾರಿಗಳು ಬಳಸಿಕೊಳ್ಳುವಂತಾಗಬೇಕು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕರೆ ನೀಡಿದ್ದಾರೆ.
ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಸಚಿವರು ಮಾತನಾಡಿದರು.
ಸಹಕಾರ ಕ್ಷೇತ್ರದಲ್ಲಿ ರಾಜ್ಯವು ತನ್ನದೇ ಆದ ಸ್ಥಾನ ಹೊಂದಿದ್ದು, ಆ ದಿಸೆಯಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದೆ. ಅದನ್ನು ಸಹಕಾರಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಚಿವರು ಸಲಹೆ ಮಾಡಿದರು.
ರಾಜ್ಯದಲ್ಲಿ 5,400 ಸಹಕಾರ ಸಂಘಗಳಿದ್ದು, ಈ ಸಂಘಗಳಲ್ಲಿ ಒಂದೇ ತಂತ್ರಾಂಶ ಅಳವಡಿಸಿಕೊಂಡು ಕಾರ್ಯನಿರ್ವಹಿಸಲು ಮುಂದಾಗಲಾಗಿದೆ ಎಂದರು.
ರಾಜ್ಯದಲ್ಲಿ ಸುಮಾರು 20 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ 14 ಸಾವಿರ ಕೋಟಿ ಸಾಲ ವಿತರಣೆ ಮಾಡಲಾಗಿದೆ ಎಂದರು.
ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಮಾಡಿದ್ದೇನೆ. ಶಾಸಕ ಅಪ್ಪಚ್ಚುರಂಜನ್ ಅವರು ಜಿಲ್ಲೆಯ ಸಹಕಾರ ಕ್ಷೇತ್ರದ ಬೆನ್ನೇಲುಬಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಹೊಸದಾಗಿ ಅನುಷ್ಠಾನಕ್ಕೆ ತಂದಿರುವ ಸಾಫ್ಟವೇರ್ ನಿಂದ ರೈತರಿಗೆ ಸಾಲ ವಿತರಣೆಗೆ ತೊಂದರೆ ಆಗುತ್ತಿದೆ. ಸಿಬ್ಬಂದಿಗಳಿಗೆ ಸರಿಯಾಗಿ ತರಬೇತಿಯಾಗಿಲ್ಲ. ರೈತರು ನೋಂದಣಿ ಕಚೇರಿಯಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾ.31 ರ ತನಕ ಹಳೆಯ ಪದ್ಧತಿಯಲ್ಲಿಯೇ ರೈತರಿಗೆ ಸಾಲ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಏ.1 ರಿಂದ ಹೊಸ ಸಾಫ್ಟವೇರ್ ಆ್ಯಪ್ ಮೂಲಕ ಕ್ರಮ ಕೈಗೊಳ್ಳಬೇಕು ಎಂದರು.
ಯಾವ ಜಿಲ್ಲೆಯಲ್ಲಿ ರೈತರಿಗೆ ಸಾಲಮನ್ನಾ ಬಾಕಿ ಉಳಿದಿದೆ ಆ ಜಿಲ್ಲೆಯ ಶಾಸಕರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಶೀಘ್ರವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಕೇಂದ್ರ ಸರ್ಕಾರ ಸಹಕಾರ ಸಂಘಗಳಿಗೆ ಹೊಸ ಕಟ್ಟಡ ನಿರ್ಮಿಸಿಕೊಡಲು ಘೋಷಣೆ ಮಾಡಿದೆ. ಆತ್ಮನಿರ್ಭರ ಯೋಜನೆಯಡಿ ಒಂದು ಸಾವಿರ ಸಹಕಾರ ಸಂಘಗಳಿಗೆ ರೂ.2 ಕೋಟಿಯಂತೆ ಅನುದಾನ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಈಗಾಗಲೇ 675 ಸಹಕಾರ ಸಂಘಗಳಿಗೆ 315 ಕೋಟಿ ಅನುದಾನ ಸಹಕಾರ ಇಲಾಖೆಗೆ ಬಂದಿದೆ ಎಂದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಸಹಕಾರ ಸಂಘಗಳಲ್ಲಿ ಸಹಕಾರಿಗಳಿಗೆ 5 ಲಕ್ಷ ರೂ.ವರೆಗೆ ಸಾಲ ಪಡೆಯಬಹುದಾಗಿದ್ದು, ಆ ನಿಟ್ಟಿನಲ್ಲಿ ಸಹಕಾರ ಸಂಘವನ್ನು ಸಹಕಾರಿಗಳು ಕಟ್ಟುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಸಹಕಾರ ಸಂಘದಲ್ಲಿ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಉತ್ತಮವಾಗಿ ಕೆಲಸ ಮಾಡಿದ್ದಲ್ಲಿ ಸಹಕಾರ ಸಂಘವನ್ನು ಬೆಳೆಸಲು ಸಾಧ್ಯ. ಜೊತೆಗೆ ಸಾಲ ಪಡೆದವರು ಸಕಾಲದಲ್ಲಿ ಮರು ಪಾವತಿ ಮಾಡಿದ್ದಲ್ಲಿ, ಸಹಕಾರ ಸಂಘವನ್ನು ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಸಹಕಾರ ಸಚಿವರು ಕೊಡಗು ಜಿಲ್ಲೆಯ ಸಹಕಾರ ಸಂಘಗಳ ಬೆಳವಣಿಗೆಗೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಆ ದಿಸೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಸಹ ಸಹಕಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಳಜಿವಹಿಸಿ ಸಾಲ ಸೌಲಭ್ಯ ಕಲ್ಪಿಸುತ್ತಿದ್ದಾರೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಸಚಿವರಾದ ಜೀವಿಜಯ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ, ಹೆಬ್ಬಾಲೆ ಸಹಕಾರ ಸಂಘದ ಅಧ್ಯಕ್ಷರಾದ ಪರಮೇಶ್, ಡಿಸಿಸಿ ಬ್ಯಾಂಕ್‍ನ ನಿರ್ದೇಶಕರಾದ ಚಿನ್ನಪ್ಪ ಇತರರು ಇದ್ದರು.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network