Header Ads Widget

ಸರ್ಚ್ ಕೂರ್ಗ್ ಮೀಡಿಯ

ನಬಾರ್ಡ್ ವತಿಯಿಂದ ಬ್ಯಾಂಕರ್ಸ್‍ಗಳ ಸಭೆ

ನಬಾರ್ಡ್ ವತಿಯಿಂದ ಬ್ಯಾಂಕರ್ಸ್‍ಗಳ ಸಭೆ


ಮಡಿಕೇರಿ ಮಾ.12: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ವತಿಯಿಂದ ಸ್ವಸಹಾಯ ಸಂಘಗಳಿಗೆ ಸಾಲ ವಿತರಣೆ, ಮತ್ತಿತರ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಬ್ಯಾಂಕರ್ಸ್‍ಗಳ ಸಭೆಯು ಶುಕ್ರವಾರ ನಗರದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. 

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಬಾರ್ಡ್‍ನ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ವೈ.ವಿ. ಗುಂಡೂರಾವ್ ಅವರು ಸ್ವಸಹಾಯ ಗುಂಪುಗಳ ಬಲವರ್ಧನೆಗೆ ಬ್ಯಾಂಕುಗಳು ಮುಂದಾಗಬೇಕು ಎಂದು ಸಲಹೆ ಮಾಡಿದರು. 

ಗ್ರಾಮೀಣ ಪ್ರದೇಶದ ಜನಜೀವನದ ಆರ್ಥಿಕ ಪರಿಸ್ಥಿತಿ ಉತ್ತಮವಾದಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಗ್ರಾಮೀಣ ಕೃಷಿ ಹಾಗೂ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಗುಂಡೂರಾವ್ ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವಂತಾಗಬೇಕು. ಇದರಿಂದ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 

ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಮನಸ್ಸಿನ ಸಕರಾತ್ಮಕ ಮನೋಬಲ ಮತ್ತು ತಂಡದೊಂದಿಗೆ ಕರ್ತವ್ಯ ನಿರ್ವಹಿಸುವ ನಾಯಕತ್ವ ಗುಣವನ್ನು ಹೊಂದಿರಬೇಕು. ಆ ನಿಟ್ಟಿನಲ್ಲಿ ಸಮಷ್ಠಿ ಅಭಿವೃದ್ಧಿಗೆ ಪ್ರತಿಯೊಬ್ಬರೂ ಹೊಂದಾಣಿಕೆಯಿಂದ ಕೈಜೋಡಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.  

ನಾಯಕತ್ವ ಎಂದರೆ ಅಧಿಕಾರವಲ್ಲ, ಜವಾಬ್ದಾರಿ ಎಂಬುದನ್ನು ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು ಎಂದು ನಬಾರ್ಡ್‍ನ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ವೈ.ವಿ.ಗುಂಡೂರಾವ್ ಅವರು ಹೇಳಿದರು. 

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ನ ಜಿಲ್ಲಾ ವ್ಯವಸ್ಥಾಪಕರಾದ ರಮೇಶ್ ಬಾಬು ಅವರು ಮಾತನಾಡಿ ಸ್ವಸಹಾಯ ಸಂಘಗಳ ಅಭಿವೃದ್ಧಿಗೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್‍ಗಳಿಂದ ಅಗತ್ಯ ಸಾಲ ಸೌಲಭ್ಯಗಳನ್ನು ತಲುಪಿಸಲಾಗುತ್ತದೆ. ಈ ಸೌಲಭ್ಯವನ್ನು ಅರ್ಹರು ಪಡೆದುಕೊಂಡು ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ಕೈಜೋಡಿಸಬೇಕಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವತಿಯಿಂದ ಹಲವು ಕಾರ್ಯಕ್ರಮಗಳಿದ್ದು, ಇವುಗಳನ್ನು ಬಳಸಿಕೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಬ್ಯಾಂಕ್‍ಗಳ ಮೂಲಕ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು. 

ನಬಾರ್ಡ್ ವತಿಯಿಂದ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದರು.  ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಆರ್.ಕೆ.ಬಾಲಚಂದ್ರ ಅವರು ಮಾತನಾಡಿ ಯಾವುದೇ ಕಾರ್ಯಕ್ರಮಗಳು ಹೊಣೆಗಾರಿಕೆಯಿಂದ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಸೌಲಭ್ಯಗಳು ಬ್ಯಾಂಕ್‍ಗಳ ಮೂಲಕ ತಲುಪುತ್ತಿದ್ದು, ಆ ನಿಟ್ಟಿನಲ್ಲಿ ಬ್ಯಾಂಕ್‍ಗಳು ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ ಎಂದು ತಿಳಿಸಿದರು. ಭಾರತೀಯ ಸ್ಟೇಟ್ ಬ್ಯಾಂಕ್‍ನ ಕ್ಷೇತ್ರ ಅಧಿಕಾರಿ ಎಂ.ಎಡಕುಂಡಲು, ಎಸ್‍ಬಿಐನ ದಿನೇಶ್ ಪೈ ಇತರರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,