ಕೌಶಲ್ಯ ಅಭಿವೃದ್ಧಿ ಯೋಜನೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ: ಡಾ.ಬಿ.ಸಿ.ಸತೀಶ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕೌಶಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವೃತ್ತಿ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಅವಕಾಶವನ್ನು ಸೃಷ್ಟಿಸಲು ಹಲವು ಯೋಜನೆ ರೂಪಿಸಿದ್ದು, ಅವುಗಳು ಸರಿಯಾಗಿ ನಿರುದ್ಯೋಗಿಗಳಿಗೆ ತಲುಪುವಂತಾಗಬೇಕು ಎಂದು ಹೇಳಿದರು.
ಜಿಲ್ಲೆಯ ಯುವ ಜನತೆ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಲು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಸಹಕಾರಿಯಾಗುವಲ್ಲಿ ಕಾರ್ಯಕ್ರಮ ರೂಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಅಂತರಾಷ್ಟ್ರೀಯ ವಲಸೆ ಕೇಂದ್ರಕ್ಕೆ ಸಂಬಂಧಿಸಿದ ಮಾಹಿತಿಯನ್ನು ಜಿಲ್ಲಾ ವೆಬ್‍ಸೈಟ್‍ನಲ್ಲಿ ಪ್ರಕಟಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರಿಗೆ ಸೂಚಿಸಿದರು.
ಕೌಶಲ್ಯ ಕೇಂದ್ರ ಯೋಜನೆಯಡಿ ಕೌಶಲ್ಯ ತರಬೇತಿ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮನ್ವಯದೊಂದಿಗೆ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಹಾಗೂ ನಾಂದಿ ಪೌಂಡೇಷನ್ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನೀಯರಿಗೆ ತರಬೇತಿ ಮತ್ತು ಜೀವನೋಪಾಯ ಕಾರ್ಯಕ್ರಮ ಅನುಷ್ಠಾನ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಉಚಿತ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ಕಾರ್ಯಕ್ರಮ ಆಯೋಜನೆಯ ಮುಂಚಿತವಾಗಿ ಮಾಧ್ಯಮಗಳ ಮೂಲಕ ಮಾಹಿತಿ ನೀಡುವ ಮೂಲಕ ಜಿಲ್ಲೆಯ ಹೆಚ್ಚಿನ ಜನರು ಇದರ ಪ್ರಯೋಜನ ಪಡೆಯಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ನಿಗಧಿಯಾದ ಮತ್ತು ಬೇಡಿಕೆ ಇರುವ ಜಾಬ್ ರೋಲ್‍ಗಳ ಕುರಿತು ತರಬೇತಿ ಸಂಸ್ಥೆಗಳು, ಚೇಂಬರ್ ಆಫ್ ಕಾಮರ್ಸ್ ಸೇರಿದಂತೆ ಇತರ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ ಗುಣಮಟ್ಟದ ತರಬೇತಿ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಅತಿಥಿ ವೃಕ್ಷ ತರಬೇತಿ ಸಂಸ್ಥೆಯ ವ್ಯವಸ್ಥಾಪಕರಾದ ಶಾಲಿನಿ ಅವರು ಮಾತನಾಡಿ ಜಿಲ್ಲೆಯಲ್ಲಿ ಟೈಲರಿಂಗ್, ಬ್ಯೂಟಿಷೀಯನ್ ಸೇರಿದಂತೆ ಅನೇಕ ತರಬೇತಿಗಳು ಚಾಲ್ತಿಯಲ್ಲಿದ್ದು, ಪ್ರವಾಸೋದ್ಯಮ ಹಾಗೂ ಸಾಪ್ಟ್ ಸ್ಕಿಲ್ ತರಬೇತಿಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ನಮ್ಮ ತರಬೇತಿ ಸಂಸ್ಥೆಯಿಂದ ಶುಲ್ಕ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಆಸಕ್ತಿ ಹೊಂದಿರುವುದಾಗಿ ಮಾಹಿತಿ ನೀಡಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಶಿವಕುಮಾರ್ ಅವರು ಹಲವು ಮಾಹಿತಿ ನೀಡಿದರು.
ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷರಾದ ದೇವಯ್ಯ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್, ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ, ನಗರಸಭೆ ಪೌರಾಯುಕ್ತರಾದ ರಾಮ್‍ದಾಸ್, ತರಬೇತಿ ಸಂಸ್ಥೆಯ ಮುಖ್ಯಸ್ಥರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಇತರರು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network