Header Ads Widget

ಸರ್ಚ್ ಕೂರ್ಗ್ ಮೀಡಿಯ

ಮೇ.28 ರಂದು ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ


ಮೇ.28 ರಂದು ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮಕ್ಕೆ ಕೈಜೋಡಿಸಿ: ಅಪ್ಪಚ್ಚು ರಂಜನ್ 

ಮಡಿಕೇರಿ ಮೇ.24: ‘ಅಜಾದಿ ಕಾ ಅಮೃತ ಮಹೋತ್ಸವ’ ಪ್ರಯುಕ್ತ ಇದೇ ಮೇ, 28 ರಂದು ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮವನ್ನು ಜಿಲ್ಲಾಡಳಿತ ವತಿಯಿಂದ ನಡೆಯಲಿದ್ದು, ಈ ಸಂಬಂಧ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು.    

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ವಿವಿಧ ಸಂಘ ಸಂಸ್ಥೆಗಳು, ಒಕ್ಕೂಟಗಳು ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು. 

ಕಾರ್ಯಕ್ರಮಕ್ಕೆ ಅಮೃತ ಸ್ವಸಹಾಯ ಗುಂಪುಗಳನ್ನು ಆಹ್ವಾನಿಸುವುದು, ಪ್ರಥಮ ದರ್ಜೆ ಕಾಲೇಜು ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳನ್ನು ಆಹ್ವಾನಿಸುವುದು, ಎನ್‍ಸಿಸಿ ವಿದ್ಯಾರ್ಥಿಗಳು, ಒಡಿಪಿ ಸಂಸ್ಥೆಯ ಪ್ರತಿನಿಧಿಗಳು, ಹೀಗೆ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹೀಗೆ ಹಲವರನ್ನು ಆಹ್ವಾನಿಸಿ ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು. 

ಕಾರ್ಯಕ್ರಮವನ್ನು ನಗರದ ಕ್ರಿಸ್ಟಲ್ ಕೋರ್ಟ್‍ನಲ್ಲಿ ಆಯೋಜಿಸುವುದು, ಹಾಗೆಯೇ ಮೆರವಣಿಗೆಯನ್ನು ಮೇ, 28 ರಂದು ಬೆಳಗ್ಗೆ 10 ಗಂಟೆಗೆ ನಗರದ ಗದ್ದುಗೆಯಿಂದ ಏರ್ಪಡಿಸುವುದು, ಹಾಗೆಯೇ ಅಂದು ನಗರದಲ್ಲಿರುವ ಎಲ್ಲಾ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.  

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಅವರು ಭೇಟಿ ನೀಡಿದ್ದ ಮಡಿಕೇರಿ ಮತ್ತು ಪೊನ್ನಂಪೇಟೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹನೀಯರನ್ನು ಸ್ಮರಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು. 

 ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸುವುದು, ಮೆರವಣಿಗೆ, ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.  

ಮಡಿಕೇರಿ ಮತ್ತು ಪೊನ್ನಂಪೇಟೆಯಲ್ಲಿ ನಡೆಯುವ ಎರಡು ಕಾರ್ಯಕ್ರಮಗಳಿಗೆ ಸರ್ಕಾರ ಒಟ್ಟು 6.60 ಲಕ್ಷ ರೂ. ಬಿಡುಗಡೆ ಮಾಡಿದ್ದು,  ಕಲಾತಂಡಗಳ ಆಹ್ವಾನ, ವೇದಿಕೆ ಕಾರ್ಯಕ್ರಮ, ಮೆರವಣಿಗೆ ಮತ್ತಿತರ ಒಳಗೊಂಡಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 

ಕಾರ್ಯಕ್ರಮದ ಪ್ರಯುಕ್ತ ಶಿಲಾ ಫಲಕ ಅಳವಡಿಸಬೇಕಿದ್ದು, ರಾಜಸೀಟಿಗೆ ಹೆಚ್ಚಿನ ಜನರು ಭೇಟಿ ನೀಡುವುದರಿಂದ ಶಿಲಾ ಫಲಕವನ್ನು ರಾಜಸೀಟಿನಲ್ಲಿ ಅಳವಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಇದಕ್ಕೆ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷರಾದ ಅನಿಲ್ ಎಚ್.ಟಿ. ಅವರು ಧ್ವನಿಗೂಡಿಸಿದರು.   

ವೇದಿಕೆ, ಮೆರವಣಿಗೆ ಹಾಗೂ ಆಹ್ವಾನ ಸಮಿತಿ ರಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಕಾರ್ಯಕ್ರಮ ರೂಪುರೇಷ ಬಗ್ಗೆ  ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನಾ ಅವರು ಮಾಹಿತಿ ನೀಡಿದರು.   

ಉಪ ವಿಭಾಗಾಧಿಕಾರಿ ಅವರ ನೇತೃತ್ವದಲ್ಲಿ ಆಹ್ವಾನ ಸಮಿತಿ ರಚಿಸಲು ನಿರ್ಧರಿಸಲಾಯಿತು. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಎಲ್ಲರನ್ನೂ ಸ್ಮರಿಸುವಂತಾಗಬೇಕು ಎಂದು ಸಭೆಯಲ್ಲಿ ಪ್ರತಿನಿಧಿಯೊಬ್ಬರು ಸಲಹೆ ಮಾಡಿದರು. 

ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.