Header Ads Widget

ಸರ್ಚ್ ಕೂರ್ಗ್ ಮೀಡಿಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ


ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ ಮೇ.17: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಅನುಷ್ಠಾನ ಸಂಬಂಧ ಅರ್ಜಿ ಆಹ್ವಾನ, ಫಲಾನುಭವಿಗಳ ಪಟ್ಟಿ ಸೇರಿದಂತೆ ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಅನುಷ್ಠಾನದ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.  

ಈಗಾಗಲೇ ಮೇ ತಿಂಗಳು ಪೂರ್ಣಗೊಳ್ಳುತ್ತಿರುವುದರಿಂದ ಎಸ್ಸಿಪಿಟಿ/ಟಿಎಸ್‍ಪಿ ಕಾರ್ಯಕ್ರಮ ಅನುಷ್ಠಾನ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಬೇಕು. ಸೆಪ್ಟೆಂಬರ್ ಅಂತ್ಯದೊಳಗೆ ಶೇಕಡಾವಾರು ಪ್ರಗತಿಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.   

 ‘ಪರಿಶಿಷ್ಟರಿಗೆ ಸರ್ಕಾರದ ಸೌಲಭ್ಯ ಕಡ್ಡಾಯವಾಗಿ ತಲುಪಿಸಬೇಕು ಎಂಬುದು ಸರ್ಕಾರದ ಬಯಕೆಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ತ್ವರಿತ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಡಾ.ಬಿ.ಸಿ.ಸತೀಶ ಅವರು ಸೂಚಿಸಿದರು.’  

 ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಜಿ.ಪಂ.ಯೋಜನಾ ನಿರ್ದೇಶಕರಾದ ಶ್ರೀಕಂಠ ಮೂರ್ತಿ, ಮುಖ್ಯ ಯೋಜನಾಧಿಕಾರಿ ರಾಜ್‍ಗೋಪಾಲ್,  ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಲೋಕೋಪಯೋಗಿ ಇಲಾಖೆ  ಕಾರ್ಯಪಾಲಕ ಎಂಜಿನಿಯರ್ ನಾಗರಾಜು,  ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಡಿಎಚ್‍ಒ ಡಾ.ಆರ್.ವೆಂಕಟೇಶ್, ಕೈಮಗ್ಗ ಮತ್ತು ಜವಳಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್ ಭಟ್, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನಾ, ಸೆಸ್ಕ್ ಎಇಇ ದೇವಯ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಕವಿತಾ, ಪೌರಾಯುಕ್ತರಾದ ರಾಮದಾಸ್, ಸಹಕಾರ ಇಲಾಖೆಯ ಸಹಾಯಕ ನಿಬಂಧಕರಾದ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂಣಚ್ಚ, ಇತರರು ಇದ್ದರು.