Header Ads Widget

ಸರ್ಚ್ ಕೂರ್ಗ್ ಮೀಡಿಯ

ಜೂ.16 ಮತ್ತು 17 ರಂದು ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಡಿಸಿ ಸೂಚನೆ


ಜೂ.16 ಮತ್ತು 17 ರಂದು ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಡಿಸಿ ಸೂಚನೆ  

ಮಡಿಕೇರಿ ಜೂ.10: ಇದೇ ಜೂನ್, 16 ಮತ್ತು 17 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶನದಂತೆ ಪರೀಕ್ಷೆ ನಡೆಸಲು ಅಗತ್ಯ ಕ್ರಮವಹಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದ್ದಾರೆ.   

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿಇಟಿ ಪರೀಕ್ಷೆ ಸಂಬಂಧ ವಿಡಿಯೊ ಸಂವಾದ ನಡೆದ ನಂತರ ಅಧಿಕಾರಿಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಅವರು ಸಿಇಟಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳುವಂತೆ ಅವರು ನಿರ್ದೇಶನ ನೀಡಿದರು.  

ಪರೀಕ್ಷಾ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡಬಾರದು. ಸುಸೂತ್ರವಾಗಿ ಸಿಇಟಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಮುನ್ನೆಚ್ಚರ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.     

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ಪುಟ್ಟರಾಜು ಅವರು ಮಾತನಾಡಿ ಜಿಲ್ಲಾ ಕೇಂದ್ರ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (864 ವಿದ್ಯಾರ್ಥಿಗಳು) ಮತ್ತು ನಗರದ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು (240 ವಿದ್ಯಾರ್ಥಿಗಳು) ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 1104 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. 

ಜೂನ್, 16 ರಂದು ಬೆಳಗ್ಗೆ 10.30 ಯಿಂದ 11.50 ಗಂಟೆ ವರೆಗೆ ಜೀವಶಾಸ್ತ್ರ ಮತ್ತು ಮಧ್ಯಾಹ್ನ 2.30 ಯಿಂದ 3.50 ಗಂಟೆವರೆಗೆ ಗಣಿತ, ಹಾಗೆಯೇ ಜೂನ್, 17 ರಂದು ಬೆಳಗ್ಗೆ 10.30 ಯಿಂದ 11.50 ಗಂಟೆ ವರೆಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ 2.30 ರಿಂದ 3.50 ಗಂಟೆ ವರೆಗೆ ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದರು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಖಜಾನಾಧಿಕಾರಿ ಪಿ.ಪದ್ಮಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಟಿ.ಮಂಜುನಾಥ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ, ನಗರದ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಮನ್, ನಿಕಟಪೂರ್ವ ಪ್ರಾಂಶುಪಾಲರಾದ ಗಣೇಶ, ನೆಲ್ಯಹುದಿಕೇರಿ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಆಂತೋನಿ ಆಳ್ವ್ವಾರೀಸ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ, ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ.ಸಿದ್ದರಾಜು, ಕುಶಾಲನಗರ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಸ್.ಟಿ.ಪುರುಷೋತ್ತಮ, ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ರಾಜಸುಂದರ ಇತರರು ಇದ್ದರು.