Header Ads Widget

ಸರ್ಚ್ ಕೂರ್ಗ್ ಮೀಡಿಯ

ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಸಂಬಂಧ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ


ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಸಂಬಂಧ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ 

ಮಡಿಕೇರಿ ಜೂ.15: ಕೊಡಗು ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಭೆ ನಡೆಯಿತು. 

ಕೊಡಗು ಜಿಲ್ಲೆಯಲ್ಲಿ ಕನ್ನಡ ಭಾಷೆ ಬಾರದಿರುವವರು ಕನ್ನಡ ಭಾಷೆ ಕಲಿಯುವಂತಾಗಬೇಕು. ಆ ನಿಟ್ಟಿನಲ್ಲಿ ಗಡಿಭಾಗದಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳುವ ಬಗ್ಗೆ ಚರ್ಚೆ ನಡೆಯಿತು. 

ಯಾವುದೇ ಭಾಷೆಯಲ್ಲಿ ಮಾತನಾಡಿದರೂ ಸಹ ಪ್ರತಿಕ್ರಿಯೆಯನ್ನು ಕನ್ನಡದಲ್ಲಿಯೇ ನೀಡಿದ್ದಲ್ಲಿ ಮತ್ತೊಬ್ಬರು ಕನ್ನಡ ಭಾಷೆ ಕಲಿಯಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆಯಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಎಲ್ಲೆಡೆ ಕನ್ನಡದಲ್ಲಿ ನಾಮಫಲಕ ಇರುವ ಸಂಬಂಧ ಸರ್ಕಾರದ ನಿಯಮವನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 

ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಎಸ್.ಮಹೇಶ್ ಅವರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕನ್ನಡ ಭಾಷೆ ಬಳಕೆಗೆ ಮತ್ತಷ್ಟು ಜಾಗೃತಿ ಮೂಡಿಸುವಂತಾಗಬೇಕು. ನಿರೀಕ್ಷಿತ ಮಟ್ಟದಲ್ಲಿ ಕನ್ನಡ ಭಾಷೆ ಬಳಕೆ ಆಗಬೇಕು. ಜಿಲ್ಲೆಯ ಎಲ್ಲಾ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಪ್ರಥಮ ಆದ್ಯತೆಯಲ್ಲಿ ಬರೆಸಿರಬೇಕು ಎಂದರು. 

ಗಡಿಗ್ರಾಮದ ಶಾಲೆಗಳಲ್ಲಿ ಮತ್ತಷ್ಟು ಮೂಲ ಸೌಕರ್ಯ ಕಲ್ಪಿಸಬೇಕು. ಇದರಿಂದ ಕನ್ನಡ ಶಾಲೆಗೆ ಸೇರುವವರ ಸಂಖ್ಯೆ ಹೆಚ್ಚಾಗಲಿದೆ ಎಂದು ಎಸ್.ಮಹೇಶ್ ಅವರು ತಿಳಿಸಿದರು. 

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ಅರ್ಜಿಗಳನ್ನು ಸಾಧ್ಯವಾದಷ್ಟು ಕನ್ನಡದಲ್ಲಿಯೇ ಬರೆಯಬೇಕು ಎಂದು ಅವರು ಸಲಹೆ ಮಾಡಿದರು. 

ಗಡಿಭಾಗದಲ್ಲಿ ಕನ್ನಡೇತರರಿಗೆ ಕನ್ನಡ ಕಲಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಬೇಕು. ಗಡಿಭಾಗದಲ್ಲಿ ಕನ್ನಡ ಕಲಿಸುವ ಕೆಲಸ ಆಗಬೇಕು ಎಂದು ಅವರು ಮನವಿ ಮಾಡಿದರು.  

     ಕುಟ್ಟ, ಮಾಕುಟ್ಟ, ಕರಿಕೆ ಭಾಗದಲ್ಲಿ ರಸ್ತೆ ಬದಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಗಡಿ ಪ್ರವೇಶ, ತಾಲ್ಲೂಕು, ಜಿಲ್ಲೆ, ರಾಜ್ಯ, ಕಿ.ಮೀ. ಮತ್ತಿತರ ಮಾಹಿತಿ ಒಳಗೊಂಡ ಫಲಕ ಅಳವಡಿಸುವಂತಾಗಬೇಕು ಎಂದು ಕೇಶವ ಕಾಮತ್ ಅವರು ಸಲಹೆ ಮಾಡಿದರು. 

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನಾ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ರಂಜಿತಾ ಕಾರ್ಯಪ್ಪ, ಭಾರತಿ ರಮೇಶ್, ಇ.ರಾಜು ಅವರು ಕನ್ನಡ ಅನುಷ್ಠಾನ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. 

ಜೂ.22 ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ:- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಇದೇ ಜೂನ್, 22 ರಂದು ಕೊಡಗು ಜಿಲ್ಲೆಗೆ ಆಗಮಿಸಿ ಸೋಮವಾರಪೇಟೆಯಲ್ಲಿ ಕನ್ನಡ ಕಾಯಕ ವರ್ಷದ ಪ್ರಯುಕ್ತ ಜಿಲ್ಲಾ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನಾ ಅವರು ಮಾಹಿತಿ ನೀಡಿದರು.

ಸೋಮವಾರಪೇಟೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಡಿಕೇರಿಗೆ ಆಗಮಿಸಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಮಹೇಶ್ ಅವರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಜೂನ್, 22 ರಂದು ‘ಕನ್ನಡ ಕಾಯಕ ವರ್ಷ’ ಸಂಬಂಧ ಜಿಲ್ಲಾ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. 

ಎಸ್‍ಎಸ್‍ಎಲ್‍ಸಿಯಲ್ಲಿ ಕನ್ನಡ ಭಾಷೆ ಪತ್ರಿಕೆಯಲ್ಲಿ 125 ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಗತ್ಯ ಸಹಕಾರಕ್ಕೆ ಕೋರಿದರು.

ಜಿ.ಪಂ.ಮುಖ್ಯ ಯೋಜನಾದಿಕಾರಿ ರಾಜಗೋಪಾಲ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೇದಮೂರ್ತಿ, ಮಂಜುನಾಥ್ ಇದ್ದರು.