ಮಳೆಹಾನಿ ಸಂಬಂಧ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್ ನಿಯಂತ್ರಣಕ್ಕೆ ವಹಿಸಲಾಗಿರುವ ಕ್ರಮಗಳ ಬಗ್ಗೆ ನಡೆದ ಸಭೆ
ವಿಪತ್ತು ನಿರ್ವಹಣೆಗೆ ಎಲ್ಲಾ ರೀತಿಯ ಮುನ್ನೆಚ್ಚರ ವಹಿಸಿ: ವಿ.ಅನ್ಬುಕುಮಾರ್
ಮಡಿಕೇರಿ ಜೂ.29(ಕರ್ನಾಟಕ ವಾರ್ತೆ):-ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ವಿಪತ್ತು ನಿರ್ವಹಣೆ ಸಂಬಂಧ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಸಂಬಂಧ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್ ನಿಯಂತ್ರಣಕ್ಕೆ ವಹಿಸಲಾಗಿರುವ ಕ್ರಮಗಳ ಬಗ್ಗೆ ಬುಧವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಿಂದ ಪ್ರಾಕೃತಿಕ ವಿಕೋಪ ಸಂಭವಿಸಿದ್ದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವುದರ ಜೊತೆಗೆ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚಿಸಿದರು.
ಈ ಬಾರಿ ಸರಾಸರಿ ಮಳೆಯ ಪ್ರಮಾಣ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆ ಆದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಸಂಬಂಧ ಪರಿಹಾರ ಕೇಂದ್ರಗಳ ಸ್ಥಾಪನೆ, ಪರಿಹಾರ ಕೇಂದ್ರದಲ್ಲಿ ಬೆಡ್‍ಶೀಟ್, ಶೌಚಾಲಯ, ಬಿಸಿನೀರು ಮತ್ತಿತರ ಮೂಲ ಸೌಕರ್ಯ ಒದಗಿಸಲು ಮುಂದಾಗಬೇಕು ಎಂದು ವಿ.ಅನ್ಬುಕುಮಾರ್ ಅವರು ಹೇಳಿದರು.
2018 ರಲ್ಲಿ ಭೂ ಕಂಪನದಿಂದ ಕೆಲವು ಕಡೆ ಭೂಮಿ ಬಿರುಕು ಬಿಟ್ಟಿತ್ತು. ಆದರೆ ಈ ಬಾರಿ ಸರಾಸರಿ ಮಳೆಯ ಪ್ರಮಾಣ ಕಡಿಮೆ ಇದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪೂರ್ವ ಮುಂಗಾರು ಸಂದರ್ಭದಲ್ಲಿ ಉತ್ತಮ ಮಳೆಯಾಗಿದೆ. ಈ ಬಾರಿ ಸರಾಸರಿ ಮಳೆಯ ಪ್ರಮಾಣ ಕಡಿಮೆ ಇದೆ ಎಂದು ಅವರು ಹೇಳಿದರು.
16 ಹೋಬಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಪರಿಹಾರ ಕೇಂದ್ರ ತೆರೆಯಲಾಗುತ್ತದೆ. ಹಾರಂಗಿ ಜಲಾಶಯ ನಿರ್ವಹಣೆಗೆ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಈಗಾಗಲೇ ತಹಶೀಲ್ದಾರರು ಮತ್ತು ಗ್ರಾಮ ಪಂಚಾಯಿತಿಗಳಿಗೆ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಹಣ ಬಿಡುಗಡೆ ಮಾಡಲಾಗಿದ್ದು, ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ ಅಗತ್ಯ ತಯಾರಿ ಮಾಡಿಕೊಂಡಿದೆ ಎಂದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದೆ. ದಿನದ 24 ಗಂಟೆ ಜಿಲ್ಲಾಡಳಿತದಲ್ಲಿ ಕಂಟ್ರೋಲ್ ರೂಂ(1077) ನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈಗಾಗಲೇ ಎನ್‍ಡಿಆರ್‍ಎಫ್ ತಂಡ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಸಂಸ್ಥೆಯ ವಿಜ್ಞಾನಿಗಳು ಜಿಲ್ಲೆಗೆ ಆಗಮಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರ ಗಮನಕ್ಕೆ ತಂದರು.
‘ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಒಟ್ಟು 44 ಮನೆ ಹಾನಿ ಆಗಿದೆ. 2 ಜಾನುವಾರು ಹಾಗೂ 3 ಕೊಟ್ಟಿಗೆ ಹಾನಿ ಪ್ರಕರಣಗಳು ವರದಿಯಾಗಿದೆ. ಇದುವರೆಗೆ ಒಟ್ಟು ರೂ.8,58,100 ಮನೆ ಹಾನಿ ಪರಿಹಾರವನ್ನು ಪಾವತಿಸಲಾಗಿದೆ. ಉಳಿದಂತೆ 2 ಜಾನುವಾರು ಹಾನಿ ಪ್ರಕರಣಗಳಿಗೆ ಒಟ್ಟು ರೂ.60 ಸಾವಿರ ಮತ್ತು 3 ಕೊಟ್ಟಿಗೆ ಹಾನಿ ಪ್ರಕರಣಗಳಿಗೆ ಒಟ್ಟು ರೂ.6,300 ಗಳನ್ನು ಎನ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಪರಿಹಾರ ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾಹಿತಿ ನೀಡಿದರು.
ಪ್ರವಾಹ ಎದುರಿಸಲು ಬೋಟ್ ಸೇರಿದಂತೆ ಅಗತ್ಯ ಉಪಕರಣಗಳನ್ನು ಸಿದ್ಧತೆ ಮಾಡಿಕೊಳ್ಳಬೇಕು. ಬೋಟ್ ಸರಿಯಾಗಿದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು. ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಪರಿವರ್ತಕಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಎಲ್ಲಾ ಹಂತದ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ವಿ.ಅನ್ಬುಕುಮಾರ್ ಅವರು ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿದ ಸೆಸ್ಕ್ ಇಇ ಅಶೋಕ್ ಅವರು ಜಿಲ್ಲೆಯಲ್ಲಿ 1 ಸಾವಿರ ವಿದ್ಯುತ್ ಕಂಬಗಳು ದಾಸ್ತಾನು ಇವೆ. ವಿದ್ಯುತ್ ಟ್ರಾನ್ಸ್‍ಫಾರ್ಮರ್‍ಗಳು ಹೆಚ್ಚುವರಿ ಇದೆ. ಹಾಗೆಯೇ 110 ‘ಕಿರಿಯ ಪವರ್ ಮ್ಯಾನ್’ಗಳನ್ನು ನಿಯೋಜಿಸಿಕೊಳ್ಳಲಾಗುತ್ತದೆ ಎಂದು ಅಶೋಕ್ ಅವರು ಮಾಹಿತಿ ನೀಡಿದರು.
ಪ್ರಾಕೃತಿಕ ವಿಕೋಪ ಎದುರಿಸುವ ಗ್ರಾಮ ಪಂಚಾಯಿತಿಗಳಿಗೆ ಸೀಮೆಎಣ್ಣೆ ಪೂರೈಸುವಂತಾಗಬೇಕು. ಆ ನಿಟ್ಟಿನಲ್ಲಿ ಆಹಾರ ಇಲಾಖೆಯ ಆಯುಕ್ತರ ಜೊತೆ ಚರ್ಚಿಸಲಾಗುವುದು. ಪ್ರವಾಹ ಹಾಗೂ ಭೂಕುಸಿತ ಪ್ರದೇಶಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಆದ್ಯತೆ ನೀಡುವಲ್ಲಿ ಮುಂದಾಗಬೇಕು ಎಂದು ವಿ.ಅನ್ಬುಕುಮಾರ್ ಅವರು ಸಲಹೆ ಮಾಡಿದರು.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ ಸೀಮೆ ಎಣ್ಣೆ ಪೂರೈಕೆಗೆ ಮನವಿ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಇರುವ ಬಗ್ಗೆ ಮಾಹಿತಿ ಇದ್ದು, ಯಾವುದೇ ಕಾರಣಕ್ಕೂ ರಸಗೊಬ್ಬರ ‘ಅಭಾವ’ ಇದೆ ಎಂಬ ವರದಿ ಕೇಳಿ ಬರಬಾರದು. ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ರಸಗೊಬ್ಬರ ಪೂರೈಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ರಸಗೊಬ್ಬರ ಅಭಾವ ಇಲ್ಲದಂತೆ ನೋಡಿಕೊಳ್ಳುವುದು ಕೃಷಿ ಇಲಾಖೆಯ ಅಧಿಕಾರಿಗಳ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ರಸಗೊಬ್ಬರ ಪೂರೈಸಬೇಕು. ರೈತರಿಗೆ ವಿಶ್ವಾಸ ಬರುವ ರೀತಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು.
ಕೋವಿಡ್ ನಿಯಂತ್ರಣ ಮತ್ತು ಲಸಿಕೆಯ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಎಚ್ಚರವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
‘ಅಧಿಕಾರಿಗಳು ಆದೇಶ ಮಾಡುವುದರ ಜೊತೆಗೆ ಅನುಷ್ಠಾನ ಮಾಡಬೇಕು. ಆದೇಶ ಮಾಡಿ ಸುಮ್ಮನಿದ್ದರೆ ಸಾಲದು, ಪಾಲಿಸಬೇಕು ಎಂದು ವಿ.ಅನ್ಬುಕುಮಾರ್ ಅವರು ಕಿವಿಮಾತು ಹೇಳಿದರು.’
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಕೋವಿಡ್ ನಿಯಂತ್ರಣದಲ್ಲಿದೆ. ಲಸಿಕಾ ಕಾರ್ಯಕ್ರಮವು ಶೇ.100 ರಷ್ಟು ಆಗಿದೆ ಎಂದು ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಜಲಜೀವನ್ ಮಿಷನ್ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯ 32 ಗ್ರಾ.ಪಂ.ವ್ಯಾಪ್ತಿಯಲ್ಲಿ ಹೆಚ್ಚಿನ ಗಮನಹರಿಸಲು ಸೂಚಿಸಲಾಗಿದೆ ಎಂದರು.
ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಂಪೂರ್ಣ ತಯಾರಿ ಮಾಡಿಕೊಂಡಿದ್ದು, ಅಗತ್ಯ ಮುನ್ನೆಚ್ಚರ ವಹಿಸುವ ನಿಟ್ಟಿನಲ್ಲಿ ಕ್ರಮವಹಿಸಿದ್ದು, ಯಾರೂ ಸಹ ಆತಂಕ ಪಡಬೇಕಿಲ್ಲ. ಹಾರಂಗಿ ಜಲಾಶಯ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡಲಾಗುತ್ತದೆ ಎಂದರು.
ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಪ್ರತೀ ವಾರ ವಿಡಿಯೋ ಸಂವಾದ ಮೂಲಕ ಸಭೆ ನಡೆಸಿ ಮಾಹಿತಿ ಪಡೆಯಲಾಗುತ್ತದೆ ಎಂದರು.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಸಂಸ್ಥೆಯ ವಿಜ್ಞಾನಿಗಳಾದ ಡಾ.ರಮೇಶ್ ಮತ್ತು ಡಾ.ಜಗದೀಶ್ ಅವರು ಅವರು ಪ್ರಾಕೃತಿಕ ವಿಕೋಪ ಬಗ್ಗೆ ಹಲವು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network