Header Ads Widget

Responsive Advertisement

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸುವ ಬಗ್ಗೆ ನಡೆದ ಪೂರ್ವಭಾವಿ ಸಭೆ


ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ; ವಿವಿಧ ಕಾರ್ಯಕ್ರಮ ಆಯೋಜಿಸಲು ಡಿಸಿ ಸಲಹೆ

ಮಡಿಕೇರಿ ಜೂ.07: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯ ಹಾಡಿ ಹಾಗೂ ಇತರೆ ಕಡೆಗಳಲ್ಲಿ ಹಮ್ಮಿಕೊಳ್ಳುವಂತೆ ಕಾರ್ಮಿ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸುವ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಬಾಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವ ಪ್ರದೇಶದಲ್ಲಿ ಶಿಕ್ಷಣದ ಮಹತ್ವ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಹಾಡಿಗಳಲ್ಲಿ ಬೀದಿನಾಟಕ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸುವುದು ಹೀಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.  

ಜಾಥಾ ಏರ್ಪಡಿಸುವುದು, ಲೋಗೋ ಬಿಡುಗಡೆ ಮಾಡುವುದು, ಬಾಲಕಾರ್ಮಿಕ ಪದ್ಧತಿಯಿಂದ ಸಮಾಜದ ಮೇಲುಂಟಾಗುವ ದುಷ್ಪರಿಣಾಮಗಳ ಬಗ್ಗೆ ಎರಡು ನಿಮಿಷದ ವೀಡಿಯೋವನ್ನು ಬಿಡುಗಡೆ ಮಾಡಿಸುವಂತೆ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ಇದೇ ಜೂನ್, 12 ರಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಬೇಕಿದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸಹಕಾರ ನೀಡುವಂತೆ ಕೋರಿದರು. 

ಈ ಸಂದರ್ಭದಲ್ಲಿ ಮಾತನಾಡಿದ ರಾಯ್ ಡೇವಿಡ್ ಅವರು ಬಾಲಕಾರ್ಮಿಕ ಪದ್ಧತಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಎಲ್ಲಿ ಯಾವ ಯಾವ ಕಡೆಗಳಲ್ಲಿ ಸಮಸ್ಯೆಗಳಿವೆ, ಅಂತಹ ಕಡೆಗಳಲ್ಲಿ ಅರಿವು ಮೂಡಿಸುವಂತಾಗಬೇಕು ಎಂದು ಸಲಹೆ ಮಾಡಿದರು. 

ಚೈಲ್ಡ್ ಲೈನ್‍ನ ನವೀನ್ ಕುಮಾರ್ ಅವರು ಶ್ರೀಮಂಗಲ, ಕುಟ್ಟ, ಸಿದ್ದಾಪುರ, ಪಾಲಿಬೆಟ್ಟ ಇತರೆ ಕಡೆಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಸಲಹೆ ಮಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ರೋಟರಿ ಸಂಸ್ಥೆಯ ಪ್ರತಿನಿಧಿ ರವೀಂದ್ರ ರೈ, ಹೋಟೆಲ್ ಅಸೋಷಿಯೇಷನ್‍ನ ಜಾಹಿರ್, ಗ್ಯಾರೇಜ್ ಅಸೋಷಿಯೇಷನ್‍ನ ಪ್ರತಿನಿಧಿಗಳು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಬಗ್ಗೆ ಹಲವು ಮಾಹಿತಿ ನೀಡಿದರು. 

ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೇದಮೂರ್ತಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎನ್.ಮಂಜುನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಇತರರು ಇದ್ದರು.