ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಾಣ
373 ಮಂದಿ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಿದ ಕೆ.ಜಿ.ಬೋಪಯ್ಯ
ಮಡಿಕೇರಿ ಜು.16: ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 373 ಫಲಾನುಭವಿಗಳ ಮನೆ ನಿರ್ಮಾಣಕ್ಕೆ ರಾಜ್ಯ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಶನಿವಾರ ಕಾರ್ಯಾದೇಶ ಪತ್ರ ವಿತರಿಸಿದರು.
ನಗರದ ತಾ.ಪಂ.ಎಸ್‍ಜಿಎಸ್‍ವೈ ಸಭಾಂಗಣದಲ್ಲಿ ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳ ಮನೆ ನಿರ್ಮಾಣದ ಆದೇಶ ಪತ್ರ ವಿತರಿಸಿ ಮಾತನಾಡಿದ ಕೆ.ಜಿ.ಬೋಪಯ್ಯ ಅವರು ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದ್ದು, ಫೆಬ್ರವರಿ ಅಂತ್ಯದೊಳಗೆ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಸಲಹೆ ಮಾಡಿದರು.
ವಸತಿ ರಹಿತ ಫಲಾನುಭವಿಗಳ ಸಂಬಂಧ ಗ್ರಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸಲ್ಲಿಸಿರುವ ಪಟ್ಟಿಗೆ ಒಪ್ಪಿಗೆ ನೀಡಲಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಬಡವರಿಗೂ ಸಹ ಸರ್ಕಾರದ ವಸತಿ ಯೋಜನೆಗಳು ತಲುಪಬೇಕು. ಯಾರೂ ಸಹ ವಾಸಕ್ಕೆ ಮನೆ ಹಾಗೂ ವಿದ್ಯುತ್ ಸಂಪರ್ಕ ಇಲ್ಲ ಎಂಬುದು ಕೇಳಿ ಬರಬಾರದು. ಆ ನಿಟ್ಟಿನಲ್ಲಿ ಗ್ರಾ.ಪಂ.ಗಳು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ಮಡಿಕೇರಿ ತಾಲ್ಲೂಕಿಗೆ 830 ಮನೆಗಳ ನಿರ್ಮಾಣಕ್ಕೆ ಅವಕಾಶ ಆಗಿದ್ದು, ಆ ನಿಟ್ಟಿನಲ್ಲಿ ಪ್ರಥಮ ಹಂತದಲ್ಲಿ 373 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ಪತ್ರ ವಿತರಿಸಲಾಗಿದೆ ಎಂದು ಶಾಸಕರು ಹೇಳಿದರು.
ಅಂಬೇಡ್ಕರ್ ವಸತಿ ಯೋಜನೆಯಡಿ 2.20 ಲಕ್ಷ ರೂ. ಹಾಗೂ ಬಸವ ವಸತಿ ಯೋಜನೆಯಡಿ 1.62 ಲಕ್ಷ ರೂ. ಹಂತ ಹಂತವಾಗಿ ದೊರೆಯಲಿದೆ. ಜೊತೆಗೆ ತಾವು ಸಹ ಹಣ ಹೊಂದಿಸಿ ಉತ್ತಮ ಮನೆಯನ್ನು ನಿರ್ಮಾಣ ಮಾಡಿಕೊಳ್ಳಬಹುದು. ಆದರೂ ಸರ್ಕಾರದ ಮಾರ್ಗಸೂಚಿಯಂತೆ ಮನೆ ನಿರ್ಮಾಣ ಮಾಡಿಕೊಳ್ಳಲು ಮುಂದಾಗುವಂತೆ ಕೆ.ಜಿ.ಬೋಪಯ್ಯ ಅವರು ಸಲಹೆ ಮಾಡಿದರು.
ಚೆಂಬು ಗ್ರಾ.ಪಂ.ವ್ಯಾಪ್ತಿಯಲ್ಲಿ ಭೂಕಂಪನ ಸಂಬಂಧಿಸಿದಂತೆ ವಿಜ್ಞಾನಿಗಳ ವರದಿ ಆಧಾರದಂತೆ ಯಾರೂ ಸಹ ಆತಂಕ ಪಡಬೇಕಿಲ್ಲ, ಆದರೆ ಜಾಗ್ರತೆ ವಹಿಸುವುದು ಅತ್ಯಗತ್ಯ ಎಂದು ಕೆ.ಜಿ.ಬೋಪಯ್ಯ ಅವರು ನುಡಿದರು.
ಪ್ರಾಕೃತಿಕ ವಿಕೋಪದಡಿ ಪ್ರತೀ ಗ್ರಾ.ಪಂ.ಗೆ ಜಿಲ್ಲಾಡಳಿತದಿಂದ 50 ಸಾವಿರ ರೂ. ಬಿಡುಗಡೆ ಆಗಿದೆ. ಆ ನಿಟ್ಟಿನಲ್ಲಿ ಗ್ರಾ.ಪಂ.ಕಾರ್ಯಪಡೆಯು ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಹೇಳಿದರು.
ವಿದ್ಯುತ್ ವ್ಯತ್ಯಯ ಸಂಬಂಧಿಸಿದಂತೆ ಸಹಾಯವಾಣಿ(1912)ಗೆ ಕರೆ ಮಾಡಿ ಮಾಹಿತಿ ನೀಡಬೇಕು. ಸಮಸ್ಯೆಗಳಿದ್ದಲ್ಲಿ ತಮ್ಮ ಗಮನಕ್ಕೆ ತರುವಂತಾಗಬೇಕು ಎಂದು ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ವಸತಿ ಯೋಜನೆ, ಶಿಷ್ಯವೇತನ, ಸ್ವಸಹಾಯ ಗುಂಪುಗಳಿಗೆ ಸಹಾಯಧನ, ವಿದ್ಯುತ್ ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ.., ಹೀಗೆ ಸರ್ಕಾರದ ಒಂದಲ್ಲ ಒಂದು ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದು ಶಾಸಕರು ನುಡಿದರು.
‘94ಸಿ, ನಮೂನೆ-57 ರಡಿ ಕೃಷಿ ಮಾಡುತ್ತಿರುವವರಿಗೆ ಅರ್ಜಿ ಸಲ್ಲಿಸಲು ಇನ್ನೂ ಅವಕಾಶವಿದ್ದು, ಅರ್ಹರು ತಹಶೀಲ್ದಾರರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಮುಂದಾಗಬೇಕು ಎಂದು ಕೆ.ಜಿ.ಬೋಪಯ್ಯ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.’
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ಬೆಳೆ ಪರಿಹಾರ ಸಂಬಂಧ ಸರ್ವೇ ಕಾರ್ಯ ಆರಂಭವಾಗಲಿದೆ. ಆ ಸಂದರ್ಭದಲ್ಲಿ ಎಲ್ಲರೂ ಕೈಜೋಡಿಸಿ ಕಾರ್ಯನಿರ್ವಹಿಸುವಂತೆ ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ತಾ.ಪಂ.ಇಒ ಶೇಖರ್ ಅವರು ಮಾತನಾಡಿ ಸರ್ವರಿಗೂ ಸೂರು ಕಲ್ಪಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಮಡಿಕೇರಿ ತಾಲ್ಲೂಕಿನ 830 ಫಲಾನುಭವಿಗಳ ಗುರಿಯಲ್ಲಿ ಮೊದಲ ಹಂತದಲ್ಲಿ 373 ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗುತ್ತದೆ ಎಂದರು.
ವಿವಿಧ ವಸತಿ ಯೋಜನೆಗೆ ಆಯ್ಕೆಯಾಗಿರುವ ಫಲಾನುಭವಿಗಳು ಮನೆ ನಿರ್ಮಾಣ ಮಾಡಿಕೊಳ್ಳಲು ಮುಂದಾಗಬೇಕು. ಶಾಸಕರ ಪ್ರಯತ್ನದಿಂದ ಮಡಿಕೇರಿ ತಾಲ್ಲೂಕಿನ ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ಅವಕಾಶವಾಗಿದೆ ಎಂದು ಶೇಖರ್ ಅವರು ಹೇಳಿದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ ವಿವಿಧ ಗ್ರಾ.ಪಂ.ಯ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು, ಫಲಾನುಭವಿಗಳು ಇತರರು ಇದ್ದರು. ಮೇಕೇರಿ ಗ್ರಾ.ಪಂ.ಪಿಡಿಒ ಶ್ರೀಧರ ಸ್ವಾಗತಿಸಿದರು. ಅಕ್ಷಿತಾ ನಿರೂಪಿಸಿದರು, ಸುನಿತಾ, ನವಾನಿ, ನಿಶಾರಾಣಿ ಪ್ರಾರ್ಥಿಸಿದರು, ಮದೆನಾಡು ಗ್ರಾ.ಪಂ.ಪಿಡಿಒ ಡಿ.ನಂಜುಂಡಸ್ವಾಮಿ ವಂದಿಸಿದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network