Header Ads Widget

ಸರ್ಚ್ ಕೂರ್ಗ್ ಮೀಡಿಯ

ಮಳೆಹಾನಿ ಸಂಬಂಧ ಮುಖ್ಯಮಂತ್ರಿಯವರಿಂದ ವಿಡಿಯೋ ಸಂವಾದ


ಮಳೆಹಾನಿ ಸಂಬಂಧ ಮುಖ್ಯಮಂತ್ರಿಯವರಿಂದ ವಿಡಿಯೋ ಸಂವಾದ

ಮಡಿಕೇರಿ ಜು.08: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆಹಾನಿಗೆ ಸಂಬಂಧಿಸಿಂತೆ ರಾಜ್ಯದ ಎಲ್ಲಾ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ಶುಕ್ರವಾರ ಪರಿಶೀಲನಾ ಸಭೆ ನಡೆಸಿದರು.

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.

ಈ ಹಿಂದೆ ಸಂಭವಿಸಿದ ಪ್ರಾಕೃತಿಕ ವಿಕೋಪವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಅನಾಹುತಗಳು ಮರುಕಳುಹಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಭೂಕುಸಿತ ಪ್ರದೇಶಗಳಲ್ಲಿನ ಇಳಿಜಾರು ಪ್ರದೇಶದಲ್ಲಿ ವಾಸಿಸುವ ಕುಟುಂಬಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು ಎಂದು ಜಿಲ್ಲಾಧಿಕಾರಿಯವರಿಗೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ನಿರ್ದೇಶನ ನೀಡಿದರು. 

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಜೂನ್ ಮಾಹೆಯಲ್ಲಿ ಶೇ.57 ರಷ್ಟು ಕಡಿಮೆ ಮಳೆಯಾಗಿತ್ತು, ಕಳೆದ 7 ದಿನಗಳಲ್ಲಿ ಶೇ.81 ರಷ್ಟು ಹೆಚ್ಚು ಮಳೆಯಾಗಿದೆ. ಹೆದ್ದಾರಿಗಳಲ್ಲಿ ಹಾಗೂ ಇತರೆ ಕಡೆ ಜರಿ ಉಂಟಾಗುತ್ತಿದೆ, ವಾಹನ ಸಂಚಾರಕ್ಕೆ ಯಾವುದೇ ರೀತಿ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸಲಾಗಿದೆ ಎಂದರು.  

ಚೆಂಬು, ಪೆರಾಜೆ, ಸಂಪಾಜೆ, ಕರಿಕೆ ಗ್ರಾಮಗಳಲ್ಲಿ ಭೂ ಕಂಪಿಸಿರುವ ಕುರಿತು ವರದಿಯಾಗಿತ್ತು, ಚೆಂಬು ಮತ್ತು ಪೆರಾಜೆ ಗ್ರಾಮಗಳಲ್ಲಿ ಜೂನ್ ತಿಂಗಳಲ್ಲಿ 7 ಸಲ ಭೂಕಂಪನ ಅನುಭವವಾಗಿದ್ದು, ಕಂದಾಯ ಸಚಿವರ ಜೊತೆ ಗ್ರಾಮಗಳಿಗೆ ತೆರಳಿ ಅಲ್ಲಿಯ ಜನರ ಜೊತೆ ಚರ್ಚಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಅಲ್ಲಿನ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ ಎಂದರು. 

ಜಿಲ್ಲೆಯಲ್ಲಿ 65 ಮನೆಗಳು ಹಾನಿಯಾಗಿದ್ದು, ಅದರಲ್ಲಿ 2 ಮನೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಉಳಿದ ಮನೆಗಳು ಭಾಗಶಃ ಹಾನಿಯಾಗಿದೆ. ಹಾಗೂ ಯಾವುದೇ ರೀತಿಯ ಪ್ರಾಣಹಾನಿ ಆಗಿಲ್ಲ, ಹಾನಿಯಾದ ಮನೆಗಳಿಗೆ ಪರಿಹಾರ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. 

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಮಾತನಾಡಿ ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ  ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲು ಸೂಚಿಸಲಾಗಿದೆ. ಯಾವುದೇ ರೀತಿಯ ಅನಾಹುತಗಳು ಆಗದಂತೆ ಎಚ್ಚರ ವಹಿಸಲಾಗಿದೆ ಎಂದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ಪಿಡಬ್ಲ್ಯುಡಿ ಇಇ ನಾಗರಾಜು, ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ಪ್ರಕೃತಿ ವಿಕೋಪದ ಸಂಯೋಜಕರಾದ ಅನನ್ಯ ವಾಸುದೇವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ತಹಶೀಲ್ದಾರ್ ಮಹೇಶ್, ಡಿಎಫ್‍ಒ ಪೂವಯ್ಯ ಇತರರು ಇದ್ದರು.