Header Ads Widget

Responsive Advertisement

ನಾರಾಯಣ ಗುರು ಮತ್ತು ವಿಶ್ವಕರ್ಮ ಜಯಂತಿ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ


ನಾರಾಯಣ ಗುರು ಮತ್ತು ವಿಶ್ವಕರ್ಮ ಜಯಂತಿ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ

ಮಡಿಕೇರಿ ಸೆ.06: ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ವತಿಯಿಂದ ಹಾಗೂ ಸಂಘ ಸಂಸ್ಥೆಗಳ ಸಹಕಾರದಲ್ಲಿ ಇದೇ ಸೆಪ್ಟೆಂಬರ್, 10 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ 17 ರಂದು ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಜಿಲ್ಲಾಡಳಿತ ಸಹಯೋಗದಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸಿದ್ದಾಪುರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ನಾರಾಯಣ ಗುರು ಜಯಂತಿಗೆ ಜಿಲ್ಲಾಡಳಿತ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಸಿದ್ದಾಪುರದ ಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಯೋಗಂ ಕೊಡಗು ಯೂನಿಯನ್ ಸಂಸ್ಥೆಯ ಜೊತೆ ಸೇರಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ವಿವಿಧ ಸಂಘ ಸಂಸ್ಥೆಗಳು ಒಟ್ಟಾಗಿ ಸೇರುವುದರಿಂದ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಯೋಗಂ ಕೊಡಗು ಯೂನಿಯನ್ ಅಧ್ಯಕ್ಷರಾದ ವಿ.ಕೆ.ಲೋಕೇಶ್ ಅವರು ಪ್ರತೀ ವರ್ಷ ಸಿದ್ದಾಪುರದಲ್ಲಿ ಶ್ರೀನಾರಾಯಣ ಗುರು ಜಯಂತಿಯನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡುವಂತೆ ಕೋರಿದರು.

ಹಾಗೆಯೇ ಇದೇ ಸೆಪ್ಟೆಂಬರ್, 17 ರಂದು ವಿಶ್ವಕರ್ಮ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ನಗರದ ಚೌಡೇಶ್ವರಿ ದೇವಾಲಯದ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸೆಪ್ಟೆಂಬರ್, 17 ರಂದು ಮಧ್ಯಾಹ್ನದ ನಂತರ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸುವ ನಿಟ್ಟಿನಲ್ಲಿ ಸಂಘಟನೆಯವರು ಜಿಲ್ಲಾಡಳಿತದ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ದೇವದಾಸ್ ಅವರು ಕಾರ್ಯಕ್ರಮ ಆಯೋಜನೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. 

ವಿಶ್ವಕರ್ಮ ಸಮಾಜದ ನಾಗರಾಜು ಅವರು ಜಿಲ್ಲಾ ಮಟ್ಟದಲ್ಲಿ ಆಯೋಜನೆ ಜೊತೆಗೆ ತಾಲ್ಲೂಕು ಮಟ್ಟದಲ್ಲಿಯೂ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಕೋರಿದರು. 

ಜಗದೀಶ್ ಆಚಾರ್ಯ, ಪ್ರಕಾಶ್ ಆಚಾರ್ಯ ಅವರು ಸೆಪ್ಟೆಂಬರ್, 17 ರಂದು ಬೆಳಗ್ಗೆ ಚೌಡೇಶ್ವರಿ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು. ಬಿಲ್ಲವ ಹಾಗೂ ವಿಶ್ವಕರ್ಮ ಸಮಾಜದ ಮುಖಂಡರು ಇತರರು ಇದ್ದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಜಯಂತಿ ಆಚರಣೆ ಸಂಬಂಧ ಹಲವು ಮಾಹಿತಿ ನೀಡಿದರು.  ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿ, ಹಲವು ಮಾಹಿತಿ ನೀಡಿದರು.