Header Ads Widget

ಸರ್ಚ್ ಕೂರ್ಗ್ ಮೀಡಿಯ

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ


ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ 

ಕೊಡಗು ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರಕ್ಕೆ ವಿಫುಲ ಅವಕಾಶ: ಎಂ.ಪಿ.ಅಪ್ಪಚ್ಚುರಂಜನ್

ಮಡಿಕೇರಿ ಸೆ.06: ಕೊಡಗು ಜಿಲ್ಲೆ ಕ್ರೀಡೆಯ ತವರೂರಾಗಿದ್ದು, ಆ ನಿಟ್ಟಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ತಿಳಿಸಿದ್ದಾರೆ.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  

ಕೊಡಗು ಜಿಲ್ಲೆಯ ಮಡಿಕೇರಿ, ಕೂಡಿಗೆ ಮತ್ತು ಪೊನ್ನಂಪೇಟೆಯಲ್ಲಿ ಕ್ರೀಡಾ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ. ಆ ನಿಟ್ಟಿನಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಲಾಗಿದೆ ಎಂದು ಶಾಸಕರು ಹೇಳಿದರು.  

ಕ್ರೀಡಾ ಸಚಿವನಾಗಿದ್ದ ಸಂದರ್ಭದಲ್ಲಿ ಕೊಡಗು ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ, ಹಾಗೆಯೇ ನೂತನ ಕ್ರೀಡಾ ನೀತಿ ಜಾರಿಗೆ ತರಲು ಪ್ರಯತ್ನಿಸಲಾಗಿತ್ತು, ಆದರೆ ಮುಂದಿನ ದಿನಗಳಲ್ಲಾದರೂ ಸಹ ಈ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಅಪ್ಪಚ್ಚುರಂಜನ್ ಅವರು ಹೇಳಿದರು.  

ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯಿಂದ ತೊಡಗಿಸಿಕೊಂಡಾಗ ಮಾತ್ರ ಕ್ರೀಡೆಯಲ್ಲಿ ಗೆಲುವು ಸಾಧಿಸಬಹುದು. ಗೆದ್ದವರನ್ನು ಪೆÇ್ರೀತ್ಸಾಹಿಸಿ ಸೋತವರನ್ನು ಬೆನ್ನುತಟ್ಟಿ ಹುರಿದುಂಬಿಸುವ ಕೆಲಸ ಮಾಡಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ತಿಳಿಸಿದರು. 

ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ದಸರಾ ಕ್ರೀಡಾಕೂಟ ನಡೆಸಲು ಸಾಧ್ಯವಾಗಿರಲಿಲ್ಲ. ಆ ದಿಸೆಯಲ್ಲಿ ಸರ್ಕಾರ ಈ ಬಾರಿ ದಸರಾ ಕ್ರೀಡಾಕೂಟವನ್ನು ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ನಡೆಸಲು ತೀರ್ಮಾನಿಸಿದೆ ಎಂದು ಅವರು ಹೇಳಿದರು.

ಕ್ರೀಡೆಯಲ್ಲಿ ಎಲ್ಲರೂ ಪಾಲ್ಗೊಳ್ಳುವುದರಿಂದ ಸದೃಢ ಆರೋಗ್ಯವನ್ನು ಪಡೆಯಬಹುದು. ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗೆದ್ದವರು ಮುಂದಿನ ಹಂತಕ್ಕೆ ಆಯ್ಕೆಯಾಗುವರು ಸೋತವರು ತಮ್ಮ ಪ್ರಯತ್ನವನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಅವರು ತಿಳಿಸಿದರು.

ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ 9 ಕೋಟಿ ರೂ. ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಜಿಲ್ಲಾ ಕ್ರೀಡಾಂಗಣ ಸಿಂಥೆಟಿಕ್ ನಿರ್ಮಾಣ ಸೇರಿದಂತೆ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾ ಅಭಿವೃದ್ಧಿಗೆ ಒತ್ತು ನೀಡಬೇಕಿದೆ ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕಾರಿ ಆಗಲಿದೆ ಎಂದರು. 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಅವರು ಮಾತನಾಡಿ ಕ್ರೀಡೆಗೆ ಹೆಸರಾದ ಜಿಲ್ಲೆಯಲ್ಲಿ ಬಹಳಷ್ಟು ಕ್ರೀಡಾಪಟುಗಳು ಇದ್ದಾರೆ. ಈ ರೀತಿಯ ಕ್ರೀಡಾಕೂಟಗಳಿಂದ ಕ್ರೀಡಾಪಟುಗಳು ಅವರ ಪ್ರತಿಭೆಯನ್ನು ಹೊರತರಬಹುದಾಗಿದೆ. ಕ್ರೀಡಾಪಟುಗಳನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ  ದಸರಾ ಕ್ರೀಡಾಕೂಟವು ಸಹಕಾರಿಯಾಗಿದೆ ಎಂದರು.   

ಸೆಪ್ಟೆಂಬರ್, 07 ರಂದು ಸೋಮವಾರಪೇಟೆ ತಾಲ್ಲೂಕಿನ ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನ, ಸೆಪ್ಟೆಂಬರ್, 08 ರಂದು ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್, 11 ಮತ್ತು 12 ರಂದು ಕೂಡಿಗೆ ಕ್ರೀಡಾ ಶಾಲೆ ಹಾಗೂ ಡಯಟ್ ಆಟದ ಮೈದಾನದಲ್ಲಿ ನಡೆಯಲಿದೆ ಎಂದರು.

ನಗರಸಭೆ ಸದಸ್ಯರಾದ ಸತೀಶ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಸುಕುಮಾರ್, ಕ್ರೀಡಾ ವಸತಿ ನಿಲಯಗಳ ತರಬೇತುದಾರರು, ದೈಹಿಕ ಶಿಕ್ಷಕರು, ಯುವ ಸಬಲೀಕರಣ ಮತ್ತು  ಕ್ರೀಡಾ ಇಲಾಖೆಯ ಸಿಬ್ಬಂದಿ ವರ್ಗದವರು, ಕ್ರೀಡಾಪಟುಗಳು ಇತರರು ಇದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ಸ್ವಾಗತಿಸಿದರು. ಕೂಡಿಗೆ ಸರ್ಕಾರಿ ಕ್ರೀಡಾ ಪ್ರೌಢಶಾಲೆಯ ಆಡಳಿತ ಅಧಿಕಾರಿ ಜಯರಾಮ್ ನಿರೂಪಿಸಿದರು. ಅಥ್ಲೆಟಿಕ್ ತರಬೇತುದಾರರಾದ ಅಂತೋನಿ ಡಿಸೋಜ ವಂದಿಸಿದರು.