ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾ ಮಟ್ಟದ 30 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ:2022
ಮಡಿಕೇರಿ ಜ.03: ವಿದ್ಯಾರ್ಥಿಗಳು ವಿಜ್ಞಾನಿಗಳ ಅನ್ವೇಷಣೆ ಹಾಗೂ ಅವರ ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ಕೈಗೊಂಡು ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಅಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕರೆ ನೀಡಿದರು.
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್‍ಸಿಎಸ್‍ಟಿಸಿ), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ- ಸ್ಟೆಪ್ಸ್), ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಹಾಗೂ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ "ಯೋಗ ಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ" ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕೊಡಗು ಜಿಲ್ಲಾ ಮಟ್ಟದ 30 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ:2022 ವನ್ನು ಉದ್ಘಾಟಿಸಿ ಮಕ್ಕಳಿಗೆ ಶುಭಾಶಯ ತಿಳಿಸಿದರು.
ಮಡಿಕೇರಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಅಧ್ಯಯನ ಮಾಡಬೇಕು. ವಿಜ್ಞಾನ ಸಮಾವೇಶವು ಮಕ್ಕಳ ಬೌದ್ಧಿಕ ವಿಕಸನ ಹಾಗೂ ಅನ್ವೇಷಣೆ ನಡೆಸಲು ಸಹಕಾರಿಯಾಗಿದೆ ಎಂದರು.
ಪ್ರಾಕೃತಿಕ ಸಂಪನ್ಮೂಲ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಪರಿಸರ ಮತ್ತು ವನ್ಯಜೀವಿಗಳ ಪಾತ್ರ ಪ್ರಮುಖವಾದುದು. ಜಿಲ್ಲೆಯಲ್ಲಿ ನಡೆಯುತ್ತಿರುವ ವನ್ಯಜೀವಿಗಳು ಮತ್ತು ಮಾನವ ಸಂಘರ್ಷದ ಬಗ್ಗೆ ವಿದ್ಯಾರ್ಥಿಗಳು ವೈಜ್ಞಾನಿಕ ಅಧ್ಯಯನ ಕೈಗೊಂಡು ಸೂಕ್ತ ಪರಿಹಾರ ಕಂಡುಕೊಳ್ಳುವ ಮೂಲಕ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಬೇಕು. ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ನೀಡಲು ಪ್ರತಿಯೊಬ್ಬರೂ ಪಣ ತೊಡಬೇಕಿದೆ ಎಂದರು.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಉದ್ದೇಶ ವಿವರಿಸಿದ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ಸಮಾವೇಶದ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಮಕ್ಕಳ ವಿಜ್ಞಾನ ಸಮಾವೇಶವು ಮಕ್ಕಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ಸಮಾವೇಶದ ಕೇಂದ್ರ ವಿಷಯದಡಿ ತಮ್ಮ ಸುತ್ತಲಿನ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಸ್ವತಃ ತಾವೇ ಪರಿಹಾರ ಕಂಡುಕೊಳ್ಳುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಹಾಗೂ ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ರೂಪುಗೊಳ್ಳಲು ಉತ್ತಮ ವೇದಿಕೆ ಕಲ್ಪಿಸುತ್ತದೆ ಎಂದರು.
ಡಿಡಿಪಿಐ ಸಿ.ರಂಗಧಾಮಯ್ಯ ಅವರು ಮಾತನಾಡಿ, ವಿದ್ಯಾರ್ಥಿಗಳು ಇಂತಹ ಸೂಕ್ತ ಅವಕಾಶಗಳನ್ನು ಬಳಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ಇಂತಹ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಶಿಕ್ಷಕರು ಪ್ರೇರಿಪಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಜಿ.ಎಚ್.ಮಹಮ್ಮದ್ ಹನೀಫ್ ಮಾತನಾಡಿ, ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳುವ ಮೂಲಕ ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಇ.ಮೊಹಿದ್ದೀನ್, ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ, ವಿಜ್ಞಾನ ಪದಾಧಿಕಾರಿಗಳಾದ ಎಂ.ಎನ್.ವೆಂಕಟನಾಯಕ್, ಜಿ.ಶ್ರೀನಾಥ್, ತಾಲ್ಲೂಕು ಕಸಾಪ ಅಧ್ಯಕ್ಷ ಅಂಬೆಕಲ್ ನವೀನ್, ಸ್ಥಂಸ್ಥೆಯ ಸಂಯೋಜಕರಾದ ಎಸ್.ಐ.ಮುನೀರ್ ಅಹ್ಮದ್, ಖಜಾಂಚಿ ಫಯಾಜ್ ಅಹ್ಮದ್, ನಿರ್ದೇಶಕ ಲಿಯಾಖತ್ ಆಲಿ, ಪ್ರಿನ್ಸಿಪಾಲ್ ಜಾಯ್ಸ್ ವಿನಯ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಎಂ.ಎಚ್. ಮುಬೀನಾ ಇತರರು ಇದ್ದರು.
ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ್ದ 24 ಮಂದಿ ವಿದ್ಯಾರ್ಥಿಗಳು ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯಗಳ ಕುರಿತು ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ಮಂಡಿಸಿದರು. ಎಸ್.ಐ.ಸುಜ್ಯೋತಿ ಮತ್ತು ತಂಡದವರು ಪರಿಸರ ಗೀತೆ ಹಾಡಿದರು. ಮುನೀರ್ ಅಹ್ಮದ್ ಸ್ವಾಗತಿಸಿದರು. ಶಿಕ್ಷಕಿ ಸುಲ್‍ಹತ್ ನಿರ್ವಹಿಸಿದರು. ಶಿಕ್ಷಕಿ ಕೆ.ಎಂ.ನೀಲಮ್ಮ ವಂದಿಸಿದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network