ಪ್ರಸಕ್ತ ಸಾಲಿನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು, ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್‍ಸಿಗಳು ಹೀಗೆ ಎಲ್ಲರೂ ಶ್ರಮಿಸುವಂತೆ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ನಿರ್ದೇಶನ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ‘ಎಸ್ಸೆಸ್ಸೆಲ್ಸಿ ಫಲಿತಾಂಶ ವಿಶ್ಲೇಷಣೆ ಮತ್ತು ಸುಧಾರಣೆ’ ಕುರಿತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಜೊತೆ ಬುಧವಾರ ನಡೆದ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕೊಡಗು ಜಿಲ್ಲೆ 11 ನೇ ಸ್ಥಾನ ಪಡೆದಿತ್ತು, ಈ ಬಾರಿ 3 ನೇ ಸ್ಥಾನದೊಳಗೆ ಫಲಿತಾಂಶ ಬರುವಂತೆ ಗುಣಮಟ್ಟದ ಕಲಿಕೆಗೆ ಎಲ್ಲರೂ ಶ್ರಮಿಸಬೇಕು ಎಂದರು.
‘ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ರಾಜ್ಯ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೂ ಮೊದಲು ಜನವರಿ ಕೊನೆ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ಜಿಲ್ಲಾ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸುವಂತೆ ಸಿ.ಪಂ.ಸಿಇಒ ಅವರು ಸಲಹೆ ಮಾಡಿದರು.’
ಮಕ್ಕಳ ಕಲಿಕೆಗೆ ವಿಶೇಷ ತರಗತಿ ನಡೆಸುವುದರ ಜೊತೆಗೆ ಪಾಠ ಪ್ರವಚನಗಳನ್ನು ಪೂರ್ಣಗೊಳಿಸಿ, ಮತ್ತೆ ಮನನ ಮಾಡುವಂತಾಗಬೇಕು ಎಂದರು.
‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ಜಿ.ಪಂ.ವತಿಯಿಂದ ಅಭಿನಂದನೆ ಸಲ್ಲಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಪ್ರಕಟಿಸಿದರು.’
‘ವಿದ್ಯಾರ್ಥಿಗಳು ಪ್ರತೀ ನಿತ್ಯ ಬರವಣಿಗೆ ಕೌಶಲ್ಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಮಾಹಿತಿ ನೀಡಬೇಕು. ಯಾವುದಾದರೂ ಶಾಲೆಗಳಲ್ಲಿ ಮಧ್ಯಂತರದಲ್ಲಿ ಶಿಕ್ಷಕರು ನಿವೃತ್ತರಾಗಿದ್ದಲ್ಲಿ ಮಾಹಿತಿ ನೀಡಬೇಕು. ಪಾಠ ಪ್ರವಚನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಡಾ.ಆಕಾಶ್ ಸೂಚಿಸಿದರು.’
ದತ್ತು ವಹಿಸಿಕೊಂಡಿರುವ ಶಾಲೆಗಳ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಫಲಿತಾಂಶಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ ಅವರು ಮಾತನಾಡಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ, ಈ ಬಾರಿ 10 ಸ್ಥಾನದೊಳಗೆ ಪರೀಕ್ಷಾ ಫಲಿತಾಂಶ ಪಡೆಯಲು ಶ್ರಮಿಸಲಾಗುವುದು ಎಂದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಸರ್ಕಾರದ ನಿರ್ದೇಶನಗಳನ್ನು ಕಾಲ ಕಾಲಕ್ಕೆ ಅನುಷ್ಠಾನಗೊಳಿಸಲಾಗುತ್ತಿದೆ. ಜೊತೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯೋಪಾಧ್ಯಾಯರ ಜೊತೆ ಸಂವಾದ, ಪೋಷಕರ ಸಭೆ ಹೀಗೆ ಹಲವು ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ವಿ.ಸುರೇಶ್(ಸೋಮವಾರಪೇಟೆ) ಅವರು ಮಾತನಾಡಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಪರೀಕ್ಷೆ ಬರೆಯುವವರಿಂದ ಉತ್ತಮ ಫಲಿತಾಂಶ ಬರುತ್ತದೆ ಎಂದು ಅವರು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್(ಮಡಿಕೇರಿ) ಮಡಿಕೇರಿ ತಾಲ್ಲೂಕಿನಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಫಲಿತಾಂಶ ಉತ್ತಮವಾಗಿದೆ. ಅನುದಾನಿತ ಶಾಲೆಗಳಲ್ಲಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಇನ್ನಷ್ಟು ಪ್ರಯತ್ನ ಮಾಡಲಾಗುವುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ(ವಿರಾಜಪೇಟೆ) ಶ್ರೀಶೈಲ ಬೀಳಗಿ ಅವರು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ರಾಜ್ಯ ಸರಾಸರಿಗೆ ಹೋಲಿಕೆ ಮಾಡಿದರೆ ಹೆಚ್ಚಿನ ಫಲಿತಾಂಶವಿದೆ. ಆದರೂ ವಸತಿ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ ಮತ್ತಷ್ಟು ಪ್ರಯತ್ನ ಮಾಡಲಾಗುವುದು ಎಂದರು.
ಶಿಕ್ಷಣಾಧಿಕಾರಿ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷಾ ನೋಡಲ್ ಅಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಹಿಂದಿನ ಸಾಲಿನ ಪರೀಕ್ಷಾ ಫಲಿತಾಂಶ ವಿಶ್ಲೇಷಣೆ ಕುರಿತು ಮಾಹಿತಿ ನೀಡಿ, ಈ ಬಾರಿ 6,587 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದು, ಇದರಲ್ಲಿ 6,303 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಪೋಷಕರ ಸಭೆ, ಶಿಕ್ಷಕರಿಗೆ ಮಾರ್ಗದರ್ಶನ, ವಿದ್ಯಾರ್ಥಿಗಳೊಂದಿಗೆ ಸಂವಾದ, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ವಹಿಸಬೇಕಾದ ಧನಾತ್ಮಕ ಚಿಂತನೆ, ಭಯ ನಿವಾರಣೆ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗದರ್ಶನ, ಗುಂಪು ಕಲಿಕೆ, ಹೀಗೆ ವಿವಿಧ ಕಲಿಕಾ ಚಟುಚಟಿಕೆಗಳಿಗೆ ಒತ್ತು ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಶಾಲ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪ ಯೋಜನಾಧಿಕಾರಿ ಕೃಷ್ಣಪ್ಪ, ವಿಷಯ ಪರಿವೀಕ್ಷಕರಾದ ಬಿಂದು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಡಯಟ್ ಉಪನ್ಯಾಸಕರು, ಮುಖ್ಯೋಪಾಧ್ಯಾಯರು ಇದ್ದರು.